ಪಂಚ ಗ್ಯಾರಂಟಿಗಳು ಜನರ ಬದುಕಿಗೆ ಬೆಳಕು

dvg-garantee.jpg
Published on

ದಾವಣಗೆರೆ  : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಲ್ಲಿ ಬೆಳಕು ಮೂಡಿಸಿವೆ. ಆರ್ಥಿಕತೆ ಅಭಿವೃದ್ಧಿ, ತಲಾದಾಯ ಹೆಚ್ಚಳದೊಂದಿಗೆ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಮುಂದಾಗಬೇಕೆಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಶಾಸಕ ದಿನೇಶ್ ಗೂಳಿಗೌಡ ಹೇಳಿದರು.  ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ, ಜಿಲ್ಲಾಮಟ್ಟದ ಗ್ಯಾರಂಟಿ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.  ಪಂಚ ಗ್ಯಾರಂಟಿ ಯೋಜನೆಗಳು ಮನೆ ಮಾತಾಗಿವೆ. ರಾಷ್ಟ್ರೀಯ, ಅಂತಾರಾಷ್ಟೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ನೆರೆ ರಾಜ್ಯಗಳು ಸಹ ಅನುಕರಿಸುವಂತಾಗಿದೆ. ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು ಎಂದರು.  ಅನುಷ್ಠಾನ ಹಂತದಲ್ಲಿ ಲೋಪದೋಷ ಕಂಡುಬಂದಲ್ಲಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕು. ಯಾವೊಬ್ಬ ಫಲಾನುಭವಿಯೂ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ಹೇಳಿದರು.  ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್, ಉಪಾಧ್ಯಕ್ಷರಾದ ರಾಜೇಶ್ವರಿ, ಕೆ.ಎನ್. ಮಂಜುನಾಥ್, ನಂಜಾನಾಯ್ಕ, ಅನೀಸ್ ಪಾಷಾ, ಸಮಿತಿ ಸದಸ್ಯರು, ವಿವಿಧ ಇಲಾಖೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net