25 ಹಾಸ್ಟೆಲ್ ಗಳ ಸ್ವಂತ ಕಟ್ಟಡಕ್ಕೆ ನಿವೇಶನ ಮಂಜೂರು

DC_Venkatesh_DVG-1.jpg
Published on

ದಾವಣಗೆರೆ : ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ 25 ಹಾಸ್ಟೆಲ್ಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ನಗರಾಭಿವೃದ್ಧಿ ಪ್ರಾಧಿಕಾರ, ಪಾಲಿಕೆ ಹಾಗೂ ನಗರಾಭಿವೃದ್ದಿ ಕೋಶದ ಮೂಲಕ ನಾಗರಿಕ ಸೌಲಭ್ಯವುಳ್ಳ ನಿವೇಶನ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
 ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಇಲಾಖೆ ಅಧಿಕಾರಿಗಳು ನಿವೇಶನ ನೋಂದಾಯಿಸಿಕೊಂಡು ಹಾಸ್ಟೆಲ್ ಕಟ್ಟಡ ನಿರ್ಮಾಣ ಮಾಡುವಂತೆ ಸೂಚಿಸಿದರು.
 ವಿವಿಧ ಇಲಾಖೆಗಳಾದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಮೂಲಕ 21642 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಊಟ, ವಸತಿ ಮತ್ತು ಶಾಲೆಯ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
 ಸಮಾಜ ಕಲ್ಯಾಣ ಇಲಾಖೆಯಿಂದ 38 ಮೆಟ್ರಿಕ್‌ಪೂರ್ವ ಹಾಗೂ 28 ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ 7050 ವಿದ್ಯಾರ್ಥಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 35 ಮೆಟ್ರಿಕ್ ಪೂರ್ವ ಮತ್ತು 45 ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ 7000 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸೌಲಭ್ಯ ಪಡೆದಿದ್ದಾರೆ ಎಂದು ತಿಳಿಸಿದರು.
 ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ದಾವಣಗೆರೆ, ಚನ್ನಗಿರಿ ಹಾಗೂ ಜಗಳೂರು ತಾಲೂಕಿನಲ್ಲಿ 14 ಮೆಟ್ರಿಕ್ ಪೂರ್ವ ಮತ್ತು ನಂತರದ ಹಾಸ್ಟೆಲ್ಗಳಲ್ಲಿ 1327 ವಿದ್ಯಾರ್ಥಿಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 7 ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 425 ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗಿದೆ.
 ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಇಂದಿರಾಗಾಂಧಿ ವಸತಿ ಶಾಲೆ, ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಪದವಿ ಪೂರ್ವ ವಸತಿ ಶಾಲೆ ಸೇರಿ 23 ವಿವಿಧ ವಸತಿ ಶಾಲೆಗಳಿದ್ದು 6 ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೆ 5840 ವಸತಿಯುತ ಶಿಕ್ಷಣ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.  
 ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ. ನಾಗರಾಜ್, ಬಿ.ಸಿ.ಎಂ. ಜಿಲ್ಲಾ ಅಧಿಕಾರಿ ಗಾಯತ್ರಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಂಕರ ಬಂಕಾಪುರಮಠ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್ ಮಠದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net