ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ

DVG-KARYAGARA-10.jpg
Published on

ದಾವಣಗೆರೆ : ಪೋಕ್ಸೋ ಉಲ್ಲಂಘನೆ ತಡೆ ಮತ್ತು ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ್ ಹೇಳಿದರು.  ನಗರದ ಗುರುಭವನದಲ್ಲಿ ತಾಲೂಕಿನ ಶಾಲಾ ಶಿಕ್ಷಕಿಯರಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು.  ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿರುವ ಪೋಕ್ಸೋ ಪ್ರಕರಣ ಮತ್ತು ಬಾಲ್ಯ ವಿವಾಹ ತಡೆಯುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ. ಕೇವಲ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ವಿಷಯಗಳ ಮಾಹಿತಿಗಳನ್ನು ಸಹ ವಿದ್ಯಾರ್ಥಿಗಳಿಗೆ ತಿಳಿಸಬೇಕೆಂದರು.  ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಪೋಷಣಾ ಕಾರ್ಯದಲ್ಲಿ ಎಲ್ಲರದೂ ಬಹುದೊಡ್ಡ ಜವಾಬ್ದಾರಿ ಇದೆ ಎಂದು ತಿಳಿಸಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪ್ರಕಾಶ್ ಸಂಪನ್ಮೂಲ ವ್ಯಕ್ತಿಯಾಗಿ ಮಹಿಳೆಯರು, ಮಕ್ಕಳಿಗಾಗಿ ಇರುವ ಕಾನೂನುಗಳ ಬಗ್ಗೆ ಮತ್ತು ವಿವಿಧ ಇಲಾಖೆಗಳ ಸಮನ್ವಯತೆಯ ಬಗ್ಗೆ ಮಾಹಿತಿ ನೀಡಿದರು.  ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಇಲಾಖೆಯ ಪರವಾಗಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಕ್ಸೋ ತಡೆ ಸಮಿತಿ, ಮಕ್ಕಳ ರಕ್ಷಣಾ ಘಟಕ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net