

ದಾವಣಗೆರೆ : ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು. ಜಿ.ಪಂ. ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಈ ನಿಟ್ಟಿನಲ್ಲಿ ಈಗಾಗಲೇ ಹಲವಾರು ಅಗತ್ಯ ಕ್ರಮಗಳನ್ನು ಕೈಗೊಂಡ ಪರಿಣಾಮ ಪರಿಸ್ಥಿತಿ ಸುಧಾರಿಸಿದೆ. ಆದರೂ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ ಎಂದು ಡಿಎಚ್‌ಒಗೆ ನಿರ್ದೇಶಿಸಿದರು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಅಗತ್ಯ ಮೂಲ ಸೌಕರ್ಯಗಳಾದ ಕುಡಿಯುವ ನೀರು ಮತ್ತು ಶೌಚಗೃಹವನ್ನು ಕಡ್ಡಾಯವಾಗಿ ಹೊಂದಿರಬೇಕು. ಶೌಚಗೃಹ ಇಲ್ಲದ ಅಥವಾ ಶಿಥಿಲವಾಗಿರುವ ಶೌಚಗೃಹಗಳನ್ನು ಸಂಬಂಧಪಟ್ಟ ಶಾಲೆಗಳ ಆಡಳಿತ ಮಂಡಳಿಯಿಂದ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಯಿಂದ ದುರಸ್ತಿಪಡಿಸಬೇಕು ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೊಟ್ರೇಶ್ ಅವರಿಗೆ ಸೂಚನೆ ನೀಡಿದರು. ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು ವಸತಿ ನಿಲಯಗಳ ಕೊರತೆ ಉಂಟಾಗಿದೆ. ಆದ್ದರಿಂದ ಸಮಾಜ ಕಲ್ಯಾಣ ಇಲಾಖಾ ವತಿಯಿಂದ 5 ವಸತಿ ನಿಲಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 3 ಮತ್ತು ಪರಿಶಿಷ್ಟ ಪಂಗಡದ 2 ವಸತಿ ನಿಲಯಗಳಿಗೆ ಮಂಜೂರಾತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದರು. ಅಂಗವಿಕಲರನ್ನು ಗುರುತಿಸಿ, ಅದರಲ್ಲಿ ಪದವಿ ಪಡೆದ ಅರ್ಹರಿಗೆ ಕೌಶಲ ತರಬೇತಿ ನೀಡಿ, ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು. ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್, ಅಪರ ಜಿಲ್ಲಾಧಿಕಾರಿ ಎಸ್. ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ದಿಶಾ ಸಮಿತಿ ಸದಸ್ಯರು ಸಭೆಯಲ್ಲಿದ್ದರು.