

ದಾವಣಗೆರೆ : ಅಪಾಯಕಾರಿ ಹಾಗೂ ಮಾಲಿನ್ಯಕಾರಕ ಪಟಾಕಿಗಳ ಬದಲು ಹಸಿರು ಪಟಾಕಿಗಳ ಮಾರಾಟಕ್ಕೆ ಜಿಲ್ಲಾಧಿಕಾರಿ ಆದೇಶಿಸಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಎಸ್.ಟಿ. ನವೀನ್ ಕುಮಾರ್ ಆಗ್ರಹಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಳೆಯ ಪಟಾಕಿಗಳನ್ನು ಸಂಗ್ರಹಿಸಿ ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ಮಾರಾಟ ಮಾಡಿದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಅಂತಹ ಮಳಿಗೆಯನ್ನು ಜಪ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡಿದರೆ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆಯಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು. ಕಪ್ಪತಗುಡ್ಡದಲ್ಲಿ ಸಾವಿರಾರು ಎಕರೆಯಲ್ಲಿ ಗಣಿಗಾರಿಕೆ ಮಾಡಲು ಪರವಾನಗಿ ನೀಡುವ ಸರ್ಕಾರದ ಮಟ್ಟದಲ್ಲಿ ನಡೆದಾಗ ನಮ್ಮ ಸಂಘಟನೆಯಿಂದ ವಿರೋಧ ವ್ಯಕ್ತಪಡಿಸಲಾಯಿತು. ಸದ್ಯಕ್ಕೆ ಸರ್ಕಾರ ಆ ವಿಷಯದಲ್ಲಿ ಮೌನವಾಗಿದೆ. ಮತ್ತೇನಾದರೂ ಆ ಪ್ರಯತ್ನಕ್ಕೆ ಕೈ ಹಾಕಿದರೆ ಗದಗದಲ್ಲಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಕ್ರಮ ಗಣಿಗಾರಿಕೆ ಆರೋಪದಡಿ ಕಾರವಾರ ಶಾಸಕ ಸತೀಶ್ ಸೈಲ್ ಬಂಧನವಾಗಿರುವುದನ್ನು ಸ್ವಾಗತಿಸುತ್ತೇವೆ. ಭೂಮಿ ತಾಯಿಗೆ ದ್ರೋಹ ಬಗೆದರೆ ಪರಿಣಾಮ ಎದುರಿಸಬೇಕಾಗುತ್ತದೆ. ಕ್ರಮ ಗಣಿಗಾರಿಕೆ ಚಟುವಟಿಕೆಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವ ಜತೆಗೆ ಪ್ರಾಣಿ, ಪಕ್ಷಿಗಳಿಗೂ ಕಂಟಕವಾಗಿದೆ ಎಂದು ತಿಳಿಸಿದರು. ವೇದಿಕೆ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಮಾತನಾಡಿ, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು. ಅರಣ್ಯ ಭೂಮಿಗಳ ದಾಖಲೀಕರಣ ಮಾಡಬೇಕು. ಪರಿಭಾವಿತ ಅರಣ್ಯ ಪ್ರದೇಶಗಳೂ ದಾಖಲೀಕರಣವಾಗಬೇಕು ಎಂದು, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಪರಿಸರ ಸಚಿವ ಈಶ್ವರ ಖಂಡ್ರೆ ಅವರಿಗೆ ಒತ್ತಾಯಿಸಿದರು. ಟಿ. ರುದ್ರಮುನಿ, ಎನ್. ತಿಪ್ಪೇಸ್ವಾಮಿ, ಅಜಯ್ ಕುಮಾರ್, ಎನ್.ಕೆ. ಕೊಟ್ರೇಶ್ ಇದ್ದರು.