

ದಾವಣಗೆರೆ : ನಮ್ಮ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಜಿಲ್ಲಾ ಪೊಲೀಸ್ ವತಿಯಿಂದ ನಗರದ ರೇಣುಕ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ರಸ್ತೆ ಸುರಕ್ಷತಾ ನಿಯಮಗಳು ಇರುವುದು ವಾಹನ ಸವಾರರ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿರಿ ಎಂದು ತಿಳಿಸಿದರು. ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ವಾಹನ ಸವಾರರಿಗೆ ಸತತ ಒಂದು ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಚಾರ ನಿಯಮಗಳ ಪಾಲನೆ ಬಗ್ಗೆ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಮಾತನಾಡಿ, ವಾಹನ ಸವಾರರೆಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಿದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು. ಹೆಚ್ಚುವರಿ ಎಸ್ಪಿ ಜಿ. ಮಂಜುನಾಥ ಪ್ರಾಸ್ತಾವಿಕ ಮಾತನಾಡಿ, ಜಿಲ್ಲಾ ಪೊಲೀಸ್ ವತಿಯಿಂದ ಒಂದು ತಿಂಗಳ ಕಾಲ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ್ದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಅಪಘಾತ ರಹಿತ ವಾಹನ ಚಾಲಕರಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು. ರಸ್ತೆ ಸುರಕ್ಷತಾ ನಿಯಮಗಳ ಸಂಬಂಧ ವಿವಿಧ ಶಾಲೆಗಳಲ್ಲಿ ನಡೆಸಿದ್ದ ಚಿತ್ರಕಲೆ, ರಸಪ್ರಶ್ನೆ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ, ಬಹುಮಾನ ನೀಡಲಾಯಿತು. ಆರ್‌ಟಿಒ ಅಧಿಕಾರಿಗಳಾದ ಮಹಮ್ಮದ್ ಖಾಲಿದ್, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸೈಫುಲ್ಲಾ, ಸಂಚಾರ ಪೊಲೀಸ್ ಅಧಿಕಾರಿಗಳಾದ ಪಿಎಸ್‌ಐ ಶೈಲಜಾ, ನಿರ್ಮಲಾ, ಜಯಶೀಲಾ, ಮಂಜಪ್ಪ ಇದ್ದರು. ಸಂಚಾರ ವೃತ್ತದ ಸಿಪಿಐ ಮಂಜುನಾಥ ನಲವಾಗಲು ಸ್ವಾಗತಿಸಿದರು. ನಗರ ಡಿವೈಎಸ್ಪಿ ಶರಣಬಸವೇಶ್ವರ ಭೀಮರಾವ್ ವಂದಿಸಿದರು.