ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಕ್ರಮ

dvg-sp-office-meeting.jpg
Published on

ದಾವಣಗೆರೆ : ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಸೂಕ್ತ ಮಾಹಿತಿಯೊಂದಿಗೆ ಪ್ರಕರಣ ದಾಖಲಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹೇಳಿದರು.  ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.  ಈ ಕುರಿತು ಮತ್ತಷ್ಟು ಅರಿವು ಮೂಡಿಸಲಾಗುವುದು. ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.  ಪಾಲಕರು ಮಕ್ಕಳಿಗೆ ಗುಣಮಟ್ಟದ ಮತ್ತು ಉನ್ನತ ಶಿಕ್ಷಣದ ವರೆಗೆ ವಿದ್ಯಾಭ್ಯಾಸ ಮಾಡಿಸಬೇಕು. ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕರಿಸಬೇಕು ಎಂದು ತಿಳಿಸಿದರು.  ಇತ್ತೀಚಿನ ದಿನಗಳಲ್ಲಿ ಮಕ್ಕಳು ವಿವಿಧ ರೀತಿಯ ದುಶ್ಚಟಗಳಿಗೆ ಹಾಗೂ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ವ್ಯಸನದಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.  ಸಭೆಯಲ್ಲಿ ಭಾಗವಹಿಸಿದ ದಲಿತ ಮುಖಂಡರು ಕೇಳಿದ ಪ್ರಶ್ನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಸಮಸ್ಯೆಗಳನ್ನು ತ್ವರಿತ ಗತಿಯಲ್ಲಿ ಬಗೆಹರಿಸಿ, ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ದೊರಕಿಸುವುದೇ ಈ ಸಭೆಯ ಉದ್ದೇಶವಾಗಿದೆ ಎಂದರು.  ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ. ಮಂಜುನಾಥ್, ವಿಜಯ್ ಕುಮಾರ್ ಎನ್. ಸಂತೋಷ್, ಅಬಕಾರಿ ಉಪ ಆಯುಕ್ತ ಸಿ.ಎನ್. ಜುನೈ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ದಲಿತ ಸಂಘಟನೆಯ ಮುಖಂಡರು, ಸಾರ್ವಜನಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net