

ದಾವಣಗೆರೆ : ವಿಜಯವಾಣಿ ವತಿಯಿಂದ, ದಾವಣಗೆರೆ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಿಭಾಗ ಹಾಗೂ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಯ ವಿಜೇತರಿಗೆ ವಿಜಯವಾಣಿ ದಾವಣಗೆರೆ ಕಚೇರಿಯಲ್ಲಿ ಮಂಗಳವಾರ ಬಹುಮಾನ ವಿತರಣೆ ಮಾಡಲಾಯಿತು. ಪ್ರೌಢಶಾಲಾ ವಿಭಾಗದಲ್ಲಿ ವಿಜೇತರಾದವರು ಮತ್ತು ಪಿಯುಸಿ ಹಾಗೂ ಪ್ರಥಮ ದರ್ಜೆ ಕಾಲೇಜು ವಿಭಾಗದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದಾವಣಗೆರೆ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಅಶೋಕ್ ಕುಮಾರ್ ವೀ. ಪಾಳೇದ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶಾಂತಯ್ಯ ಪರಡಿಮಠ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಬಹುಮಾನ ವಿತರಿಸಿದರು. ಸ್ಪರ್ಧೆಯ ತೀರ್ಪುಗಾರರಾಗಿದ್ದ ಎಚ್. ಬಾಲರಾಜ್, ವೀರೇಶ ವಾಲಿಶೆಟ್ಟರ್ ಇದ್ದರು. ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಹೀರಾತು ವಿಭಾಗದ ವ್ಯವಸ್ಥಾಪಕ ಎಂ.ಎಸ್. ಕುಮಾರಸ್ವಾಮಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು. ಮುಖ್ಯ ಉಪ ಸಂಪಾದಕ ಹರ್ಷ ಪುರೋಹಿತ್ ಕಾರ್ಯಕ್ರಮ ನಿರೂಪಿಸಿದರು. ವಿಶೇಷ ವರದಿಗಾರ ರಮೇಶ ಜಹಗೀರದಾರ್ ಸ್ವಾಗತಿಸಿದರು. ಹಿರಿಯ ವರದಿಗಾರ ಡಿ.ಎಂ. ಮಹೇಶ್ ವಂದಿಸಿದರು.