ಕಾಯಂ ಬೋಧಕ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವ

dvg-vajra-mahotsava.jpg
Published on

ದಾವಣಗೆರೆ  : ನಗರದ ದೃಶ್ಯಕಲಾ ಮಹಾವಿದ್ಯಾಲಯಕ್ಕೆ ಅಗತ್ಯವಿರುವ ಕಾಯಂ ಬೋಧಕರ ಹುದ್ದೆಗಳ ಮಂಜೂರಾತಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಹೇಳಿದರು.  ಮಹಾವಿದ್ಯಾಲಯದ ವಜ್ರ ಮಹೋತ್ಸವ ಸಮಾರೋಪದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.  ಈ ಕುರಿತು ಸಿಂಡಿಕೇಟ್ ಮತ್ತು ಸಲಹಾ ಸಮಿತಿ ಸದಸ್ಯರೊಂದಿಗೆ ಚರ್ಚಿಸಲಾಗುವುದು. ಮುಂಬರುವ ದಿನಗಳಲ್ಲಿ ಸಿಎಂ ಹಾಗೂ ಶಿಕ್ಷಣ ಸಚಿವರ ಬಳಿಗೆ ನಿಯೋಗ ತೆಗೆದುಕೊಂಡು ಹೋಗುವ ಚಿಂತನೆಯಿದೆ ಎಂದು ತಿಳಿಸಿದರು.  ದೃಶ್ಯಕಲಾ ಮಹಾವಿದ್ಯಾಲಯವನ್ನು ದೇಶದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಉನ್ನತ ಕಲಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು. ಈ ಕಾಲೇಜು ಕಲಾ ಕ್ಷೇತ್ರದಲ್ಲಿ ನಾಡಿನ ಹೆಮ್ಮೆಯ ಸಂಸ್ಥೆಯಾಗಿದೆ ಎಂದರು.  ಕಾಲೇಜಿನ ಹಳೇ ವಿದ್ಯಾರ್ಥಿಗಳು ತಾವು ಕಲಿತ ಕಾಲೇಜಿನ ಮೇಲಿನ ಅಭಿಮಾನದಿಂದ ವರ್ಷವಿಡೀ ಕಾರ್ಯಕ್ರಮ ನಡೆಸಿಕೊಟ್ಟರು. ಇದರಿಂದಾಗಿ ಕಾಲೇಜು ನಾಡಿನಾದ್ಯಂತ ಪ್ರಚಾರ ಪಡೆದು ಬೆಳಕಿಗೆ ಬರಲು ಸಾಧ್ಯವಾಯಿತು. ಮಹಾ ವಿದ್ಯಾಲಯವು ಮುಂದೆ ಶತಮಾನೋತ್ಸವ ಆಚರಿಸುವಂತಾಗಲಿ ಎಂದು ಆಶಿಸಿದರು.  ಕಾಲೇಜಿನ ಹಳೇ ವಿದ್ಯಾರ್ಥಿ ಹಾಗೂ ಮುಂಬಯಿಯ ಓಗಿಲ್ವಿ ಸಂಸ್ಥೆಯ ಕ್ರಿಯೇಟಿವ್ ಡೈರೆಕ್ಟರ್ ಹರೀಶ್ ಆಚಾರ್ಯ ಮಾತನಾಡಿ, ಶ್ರದ್ಧೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮಕ್ಕೆ ಶಾಶ್ವತ ಫಲ ಸಿಗುತ್ತದೆ. ಯುವ ಕಲಾವಿದರು ವೃತ್ತಿ ಕೌಶಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.  ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ ಮಾತನಾಡಿದರು. ಕುಲಸಚಿವ ಶಬ್ಬೀರ ಬಾಷಾ ಗಂಟಿ ಸ್ವಾಗತಿಸಿದರು. ಪ್ರಾಚಾರ್ಯ ಡಾ. ಜೈರಾಜ್ ಚಿಕ್ಕಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್ ಇದ್ದರು. ಡಾ.ಸತೀಶಕುಮಾರ ವಲ್ಲೇಪುರೆ ವಂದಿಸಿದರು. ಡಾ. ದತ್ತಾತ್ರೇಯ ಭಟ್ ಕಾರ್ಯಕ್ರಮ ನಿರೂಪಿಸಿದರು.  ನಂತರ ಹಳೇ ವಿದ್ಯಾರ್ಥಿಗಳು ತಮ್ಮ ಅನುಭವದ ಬುತ್ತಿಯನ್ನು ಮೆಲುಕು ಹಾಕಿದರು. ಕಲಾ ತಜ್ಞರು, ಅಂತಾರಾಷ್ಟ್ರೀಯ ಕಲಾವಿದರು ಪ್ರಾತ್ಯಕ್ಷಿಕೆ ಮತ್ತು ಸಂವಾದದ ಮೂಲಕ ಯುವ ಕಲಾವಿದರಿಗೆ ಮಾರ್ಗದರ್ಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net