ಬಗರ್‌ಹುಕುಂ ಸಾಗುವಳಿದಾರರಿಗೆ ನೀಡಿ ಹಕ್ಕುಪತ್ರ

dvg-raita-protest.jpg
Published on

ದಾವಣಗೆರೆ : ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.  ಮೆರವಣಿಗೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.  ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರೈತರು ಫಾರಂ-57 ರಲ್ಲಿ ಅರ್ಜಿಗಳನ್ನು ಸಲ್ಲಿಸಿ, 25 ರಿಂದ 30 ವರ್ಷ ಉಳುಮೆ ಮಾಡಿಕೊಂಡು ಬಂದಿರುವ ರೈತರಿಗೆ ತುರ್ತಾಗಿ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.  ವಿದ್ಯುತ್ ಇಲಾಖೆಯು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ಪ್ರಯುಕ್ತ ಹಾಗೂ ಖಾಸಗೀಕರಣ ಮಾಡುವ ಉದ್ದೇಶದಿಂದ ಆಧಾರ್ ಕಾರ್ಡ್ ಜೋಡಣೆ ಮಾಡುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.  ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮೆಕ್ಕೆಜೋಳ ಮತ್ತು ಇತರ ಬೆಳೆಗಳು ಹಾಳಾಗಿದ್ದು ರೈತರಿಗೆ ಪರಿಹಾರ ನೀಡಬೇಕು. ಇಲ್ಲಿನ ಮೆಕ್ಕೆಜೋಳವನ್ನು ಕರ್ನಾಟಕ ಹಾಲು ಒಕ್ಕೂಟಕ್ಕೆ ಸರ್ಕಾರ ಖರೀದಿಸಬೇಕು ಎಂದು ಮನವಿ ಮಾಡಿದರು.  ಕಂದಾಯ ಮತ್ತು ಭೂಮಾಪನ ಇಲಾಖೆಯಲ್ಲಿ ರೈತರನ್ನು ಹಾಗೂ ಸಾರ್ವಜನಿಕರನ್ನು ಅಲೆದಾಡಿಸುತ್ತಾರೆ. ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕರ್ತವ್ಯ ಲೋಪ ಎಸಗುವ ಅಂಥ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿ ಸಮರ್ಥರನ್ನು ನಿಯೋಜಿಸುವಂತೆ ಆಗ್ರಹಿಸಿದರು.  ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷರಾದ ಕೋಗಳಿ ಮಂಜುನಾಥ್, ಮಾಯಕೊಂಡ ಅಶೋಕ, ವಕೀಲ ಮಂಜುನಾಥ್, ಮಿಯಾಪುರ ತಿರುಮಲೇಶ್, ಆರ್.ಎಚ್. ಪ್ರತಾಪ್, ದಶರಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net