

ದಾವಣಗೆರೆ : ರಾಜ್ಯದ ಹಿಂದುಳಿದ ವರ್ಗಗಳ ನಿಗಮ, ಮಂಡಳಿಗಳಿಗೆ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು, ಕಾರ್ಯಕರ್ತರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟ ಬಂದಾಗ ಮಾತ್ರ ಅಹಿಂದದ ಜಪ ಮಾಡುತ್ತಾರೆ. ಆದರೆ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡದೇ ಅವರನ್ನು ತುಳಿಯುವ ವ್ಯವಸ್ಥಿತ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ದೂರಿದರು. ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ನಿಗಮಗಳ ಅನುದಾನ ಕಡಿತಗೊಳಿಸಿದ್ದಾರೆ ಎಂದು ಆರೋಪಿಸಿದರು. ಹೂಗಾರ, ಕುಂಬಾರ, ಸವಿತಾ, ಈಡಿಗ, ಉಪ್ಪಾರ ಸೇರಿ ಹಲವು ಸಣ್ಣ ಸಮುದಾಯಗಳ ಏಳಿಗೆಗೆ ಬಿಜೆಪಿ ಅಧಿಕಾರಾವಧಿಯಲ್ಲಿ ನಿಗಮ ರಚನೆ ಮಾಡಲಾಗಿತ್ತು. ಈ ನಿಗಮಗಳಿಗೆ ಹಲವು ಜನರು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅರಿವು ಯೋಜನೆಯಡಿ ಲಕ್ಷಾಂತರ ವಿದ್ಯಾರ್ಥಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ 900 ಮಕ್ಕಳಿಗೆ ಮಾತ್ರ ಸೌಲಭ್ಯ ಒದಗಿಸಲಾಗಿದೆ. ಸರ್ಕಾರ ಕೂಡಲೇ ಉಳಿದ ಅರ್ಹ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಕಾಂಗ್ರೆಸ್ ಸರ್ಕಾರ ಬಜೆಟ್‌ನಲ್ಲಿ 1500 ಕೋಟಿ ರೂ. ಘೋಷಣೆ ಮಾಡಿ ಕೇವಲ 57.4 ಕೋಟಿ ರೂ. ವೆಚ್ಚ ಮಾಡಿದೆ. ಕೂಡಲೇ ನಿಗಮಗಳಿಗೆ ಅನುದಾನ ಒದಗಿಸಿ ಇಲ್ಲವೇ ನಿಗಮಗಳನ್ನು ಮುಚ್ಚಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಬಸವರಾಜ ನಾಯ್ಕ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ನಾಗಪ್ಪ, ಮುಖಂಡರಾದ ಮಹೇಂದ್ರ ಹೆಬ್ಬಾಳು, ಬಿ.ಎಂ. ಸತೀಶ್, ಎನ್. ಮಂಜುನಾಥ್, ರವಿಕುಮಾರ್, ಶಿವನಗೌಡ ಟಿ. ಪಾಟೀಲ್, ಅನಿಲ್ ನಾಯ್ಕ ಇದ್ದರು.