ಧರ್ಮಸ್ಥಳ ಅಪಪ್ರಚಾರದ ವಿರುದ್ಧ ಆಕ್ರೋಶ

dvg-Dharmasthala.jpg
Published on

ದಾವಣಗೆರೆ : ಧರ್ಮಸ್ಥಳದ ಮಂಜುನಾಥ ಸ್ವಾಮಿ ಕ್ಷೇತ್ರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಂಚಿಕೊಳ್ಳುತ್ತಿರುವುವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಭಕ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.  ಜಯದೇವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಆಕ್ರೋಶ ಹೊರಹಾಕಿದರು. ಜೈ ಧರ್ಮಸ್ಥಳ, ಧರ್ಮಸ್ಥಳದ ಜತೆಗೆ ನಾವಿದ್ದೇವೆ ಎಂಬ ಭಿತ್ತಿಪತ್ರಗಳನ್ನು ಹಿಡಿದಿದ್ದರು.  ಜಯದೇವ ವೃತ್ತದಿಂದ ಮೆರವಣಿಗೆ ಆರಂಭಿಸಿ, ಉಪ ವಿಭಾಗಾಧಿಕಾರಿ ಕಚೇರಿ ತಲುಪಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಕರಾವಳಿ ಭಾಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಬಿಜೆಪಿ, ಕಾಂಗ್ರೆಸ್ ಮುಖಂಡರು ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು.  ಧರ್ಮಸ್ಥಳದ ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪಸ್ವಾಮಿ ದೇಗುಲಕ್ಕೆ 8 ಶತಮಾನಗಳ ಇತಿಹಾಸವಿದೆ. ಕ್ಷೇತ್ರಕ್ಕೆ ರಾಜ್ಯ, ಹೊರರಾಜ್ಯದ ಸಾವಿರಾರು ಭಕ್ತರು ನಿತ್ಯ ಭೇಟಿ ನೀಡುತ್ತಿದ್ದಾರೆ. ಇಂತಹ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.  ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಅವರ ಬಗ್ಗೆ ಸುಳ್ಳು ಆರೋಪಗಳನ್ನು ಹೊರಿಸಿ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ. ಇದರಿಂದ ಕ್ಷೇತ್ರದ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಈ ಪ್ರಯತ್ನ ಕೈಗೂಡುವುದಿಲ್ಲ ಎಂದು ಹೇಳಿದರು.  ಹೆಬ್ಬಾಳ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಮಾತನಾಡಿ, ಧಾರ್ಮಿಕ ಕ್ಷೇತ್ರದಲ್ಲಿ ಧರ್ಮಸ್ಥಳದ ಕಾರ್ಯ ದೊಡ್ಡದು. ಇದನ್ನು ಸಹಿಸದ ಶಕ್ತಿಗಳು ಅಪಪ್ರಚಾರ ಮಾಡುತ್ತಿವೆ. ವೀರೇಂದ್ರ ಹೆಗ್ಗಡೆ ಅವರ ತೇಜೋವಧೆ ಸಲ್ಲದು ಎಂದು ತಿಳಿಸಿದರು.  ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸರ್ಕಾರ ಮಾಡದೇ ಇರುವ ಕಾರ್ಯವನ್ನು ಧರ್ಮಸ್ಥಳ ಕ್ಷೇತ್ರ ಸಾಧಿಸಿದೆ. ಗ್ರಾಮೀಣ ಪ್ರದೇಶದ ಜನರ ಬದುಕನ್ನು ಶ್ರೀಮಂತಗೊಳಿಸುವ ಕೆಲಸವನ್ನು ವೀರೇಂದ್ರ ಹೆಗ್ಗಡೆ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.  ಕೊಲೆಗೀಡಾದ ಸೌಜನ್ಯಾಗೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆ. ಆದರೆ, ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಸನಾತನ ಹಿಂದು ಧರ್ಮಕ್ಕೆ ಕೊಡಲಿ ಪೆಟ್ಟು ನೀಡುವ ಹುನ್ನಾರ ಸಹಿಸಲು ಸಾಧ್ಯವಿಲ್ಲ. ಕ್ಷೇತ್ರದ ಪಾವಿತ್ರ್ಯವನ್ನು ಹಾಳು ಮಾಡುವುದು ತಪ್ಪು ಎಂದು ಹೇಳಿದರು.  ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಾಜಿ ಮೇಯರ್ ಎಸ್.ಟಿ. ವೀರೇಶ್, ಮಾಜಿ ಉಪಮೇಯರ್ ಸೋಗಿ ಶಾಂತಕುಮಾರ್, ಪಾಲಿಕೆ ಮಾಜಿ ಸದಸ್ಯ ಎ.ನಾಗರಾಜ್, ವಿಶ್ವ ಹಿಂದು ಪರಿಷತ್ ಮುಖಂಡ ಸತೀಶ್ ಪೂಜಾರಿ, ಕುಸುಮ್ ಶ್ರೇಷ್ಠಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net