

ದಾವಣಗೆರೆ : ದ್ವಿತೀಯ ಪಿಯುಸಿ ಪರೀಕ್ಷೆಗಳು ಶನಿವಾರದಿಂದ ಮಾ. 20ರ ವರೆಗೆ ನಡೆಯಲಿದ್ದು ಜಿಲ್ಲೆಯ 35 ಕೇಂದ್ರಗಳಲ್ಲಿ 21,153 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದಾವಣಗೆರೆ ನಗರದಲ್ಲಿ 20 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹರಿಹರ ತಾಲೂಕಿನಲ್ಲಿ 4, ಹೊನ್ನಾಳಿ 2, ನ್ಯಾಮತಿ 1, ಚನ್ನಗಿರಿ 5 ಹಾಗೂ ಜಗಳೂರು ತಾಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳಿವೆ. ಜಿಲ್ಲೆಯಲ್ಲಿ 10 ಮಾರ್ಗಗಳನ್ನು ಗುರುತಿಸಲಾಗಿದೆ. ಒಟ್ಟು ಅಭ್ಯರ್ಥಿಗಳ ಪೈಕಿ 11,121 ಹೆಣ್ಣು ಮಕ್ಕಳು, 10,032 ಪುರುಷರು ಇದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಗಾಳಿ, ಬೆಳಕು, ಕುಡಿಯುವ ನೀರು, ಡೆಸ್ಕ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಭದ್ರತೆಗಾಗಿ 3 ರಿಂದ 4 ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ನಿಯೋಜಿಸಲಾಗಿದೆ. ಪ್ರತಿಯೊಂದು ಕೇಂದ್ರಕ್ಕೂ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ. ವೆಬ್ ಕಾಸ್ಟಿಂಗ್ ಮಾಡಲಾಗುವುದು. ‘ದ್ವಿತೀಯ ಪಿಯುಸಿ ಪರೀಕ್ಷೆ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎರಡು ಸಭೆಗಳು ಆಗಿವೆ. ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ’ ಎಂದು ಡಿಡಿಪಿಯು ಎಸ್.ಜಿ. ಕರಿಸಿದ್ದಪ್ಪ ತಿಳಿಸಿದರು.