

ದಾವಣಗೆರೆ : ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಪಾಲರು ಕಾನೂನು ತಜ್ಞರೊಂದಿಗೆ ಚರ್ಚಿಸಿ ಈ ತೀರ್ಮಾನ ಮಾಡಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿಲ್ಲ ಎಂದು ತಿಳಿಸಿದರು. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದೂರು ಬಂದಾಗ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಆಗ ರಾಜಭವನ ಪರಿಶುದ್ಧವಾಗಿತ್ತೆ ಎಂದು ಪ್ರಶ್ನಿಸಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜಭವನ, ಇ.ಡಿ, ಸಿಬಿಐ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿತ್ತು. ಬಿಜೆಪಿ ಸರ್ಕಾರದಲ್ಲಿ ಆ ರೀತಿ ಆಗಿಲ್ಲ ಎಂದರು. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮೂಡಾ ಹಗರಣದ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಇದು ಅನುಮಾನಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ್ ಮಾತನಾಡಿ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ‘ಇನ್ನು ಮುಂದೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಜಿಲ್ಲೆಯ ಮತದಾರರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ತಿಳಿಸಿದರು. ಬಿಜೆಪಿ ಅವಧಿಯಲ್ಲಿ ಮಂಜೂರಾದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಭೂಮಿಪೂಜೆ ನೆರವೇರಿಸಿದ್ದಾರೆ. ರಾಜಕೀಯ ಕೆಸರೆರಚಾಟ ಬಿಟ್ಟು, ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಶ್ವಾಸನೆಯಂತೆ ಕ್ಷೇತ್ರಕ್ಕೆ ಯೋಜನೆಗಳನ್ನು ತರಲಿ. ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವಂತೆ ಮಾಡಲಿ ಎಂದು ಸಲಹೆ ನೀಡಿದರು. ಪಕ್ಷದ ಜಿಲ್ಲಾ ವಕ್ತಾರ ಬಿ.ಎಂ. ಸತೀಶ್ ಮಾತನಾಡಿ, ಭದ್ರಾ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸಭೆಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೋಗಿರಲಿಲ್ಲ, ಅವರು ಭದ್ರೆಗೆ ಬಾಗಿನ ಅರ್ಪಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು. ಭಾನುವಾರ ಬಾಗಿನ ಅರ್ಪಿಸುವ ಕಾರ್ಯಕ್ರಮ ಕಾಂಗ್ರೆಸ್ ಪಕ್ಷದಿಂದ ಆಯೋಜನೆಯಾಗಿದೆ. ಡಿಸಿ, ಸಿಇಒ, ಎಸ್ಪಿ ಭಾಗವಹಿಸುವುದಕ್ಕೆ ಅದು ಸರ್ಕಾರಿ ಕಾರ್ಯಕ್ರಮವಲ್ಲ ಎಂದರು. ಬಿಜೆಪಿ ಮುಖಂಡರಾದ ಲೋಕಿಕೆರೆ ನಾಗರಾಜ, ಬಿ.ಜಿ. ಅಜಯ ಕುಮಾರ್, ಧನಂಜಯ ಕಡ್ಲೇಬಾಳ್, ಅಂಜಿನಪ್ಪ, ಎನ್.ಎಚ್. ಹಾಲೇಶ್, ಪ್ರವೀಣ್ ಜಾಧವ್ ಇದ್ದರು.