

ದಾವಣಗೆರೆ : ಕಾರ್ಮಿಕರ ರಾಜ್ಯ ಮಟ್ಟದ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೇ ತಿಂಗಳಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ) ರಾಜ್ಯ ಘಟಕದ ಅಧ್ಯಕ್ಷ ಲಕ್ಷ್ಮೀ ವೆಂಕಟೇಶ್ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಮಿಕ ರಂಗದಲ್ಲಿ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ನ ವಿಭಾಗ ಇದಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಾವೇಶ ಸಂಘಟಿಸಲಾಗುತ್ತಿದೆ. ಅಂದಾಜು 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಹೊರಗುತ್ತಿಗೆ ಪದ್ಧತಿ ಹೆಚ್ಚಾದ ಬಳಿಕ ಕಾರ್ಮಿಕ ಸಂಘಟನೆಗಳು ಶಕ್ತಿ ಕಳೆದುಕೊಂಡಿವೆ. ಅಸಂಘಟಿತ ಕಾರ್ಮಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಯೋಜನೆ ರೂಪಿಸಿದೆ ಎಂದು ಮಾಹಿತಿ ನೀಡಿದರು. ಐಎನ್‌ಟಿಯುಸಿ ಮುಖಂಡರಾದ ಚಂದ್ರಶೇಖರಪ್ಪ, ತಿಪ್ಪೇಸ್ವಾಮಿ, ವೀರಭದ್ರಸ್ವಾಮಿ, ಶಿವಮೂರ್ತಿ ಇದ್ದರು.