ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ

dvg-sarkari-noukara.jpg
Published on

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ 2024-25ನೇ ಸಾಲಿನ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏ. 7 ಮತ್ತು 8 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವೀರೇಶ ಎಸ್. ಒಡೇನಪುರ ಹೇಳಿದರು.  ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏ. 7ರ ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೇರಿ ವಿವಿಧ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ತಿಳಿಸಿದರು.  ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತೆ ರೇಣುಕಾ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಭಾಗವಹಿಸುವರು ಎಂದು ಹೇಳಿದರು.  ಏ. 8 ರಂದು ಸಂಜೆ 5 ಗಂಟೆಯಿಂದ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ರೇಣುಕಾದೇವಿ, ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಪಾಲಾಕ್ಷಿ, ಖಜಾಂಚಿ ಬಿ.ಆರ್. ತಿಪ್ಪೇಸ್ವಾಮಿ, ರಾಜ್ಯ ಪರಿಷತ್ ಸದಸ್ಯ ಜಿ.ಓಬಳಪ್ಪ, ಸುಧಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net