ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ

dvg-dasara-sports-6.jpg
Published on

ದಾವಣಗೆರೆ  : ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಮೀಸಲಾತಿ ನೀಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಆಗ್ರಹಿಸಿದರು.  ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.  ಕ್ರೀಡೆಗೆ ಪ್ರಾಮುಖ್ಯತೆ ಇದೆ, ಜತೆಗೆ ಶಿಕ್ಷಣವೂ ಅಷ್ಟೇ ಅವಶ್ಯಕವಾಗಿದೆ. ಕ್ರೀಡಾಪಟುಗಳಿಗೆ ಹೆಚ್ಚಿನ ಸಹಾಯಧನ ಬಿಡುಗಡೆ ಮಾಡಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.  ಕ್ರೀಡೆಗಳಲ್ಲಿ ಬಡ ಮಕ್ಕಳು ಹೆಚ್ಚಾಗಿ ಭಾಗವಹಿಸುತ್ತಾರೆ. ಕ್ರೀಡಾಸಕ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದರು.  ಹರಿಹರ ಶಾಸಕ ಬಿ.ಪಿ. ಹರೀಶ್ ಮಾತನಾಡಿ, ಮಕ್ಕಳು ಪಾಠದ ಜತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಪ್ರಾಥಮಿಕ ಹಂತದಲ್ಲಿಯೇ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸದೃಢತೆ ಬರಲಿದೆ ಎಂದು ತಿಳಿಸಿದರು.  ಒಂದು ಕಾಲದಲ್ಲಿ ಕ್ರೀಡೆಗೆ ಅಷ್ಟು ಮಹತ್ವ ಇರಲಿಲ್ಲ, ಈಗ ಕಾಲ ಬದಲಾಗಿದೆ. ಆಟಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸೋಲೇ ಗೆಲುವಿನ ಮೆಟ್ಟಿಲು ಅಂದುಕೊಂಡು ಸ್ಪರ್ಧಾ ಮನೋಭಾವನೆಯಿಂದ ಆಡಬೇಕು ಎಂದು ಹೇಳಿದರು.  ದೂಡಾ ಅಧ್ಯಕ್ಷ ದಿನೇಶ್.ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಕ್ರೀಡಾಪಟುಗಳ ಪರಿಚಯ ಮಾಡಿಕೊಂಡು ಪ್ರೋತ್ಸಾಹಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಹರ್ಷ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net