ಕ್ರೀಡೆ ಜೀವನದ ಒಂದು ಭಾಗವಾಗಲಿ

handicap.jpg
Published on

ದಾವಣಗೆರೆ : ಪ್ರತಿಯೊಬ್ಬ ಮನುಷ್ಯನಿಗೂ ಕ್ರೀಡೆ ಅತ್ಯವಶ್ಯಕ. ದೈನಂದಿನ ಜೀವನದ ಒಂದು ಭಾಗವಾಗಿ ಕ್ರೀಡೆಯನ್ನು ರೂಪಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ತಿಳಿಸಿದರು.
 ವಿಶ್ವ ಅಂಗವಿಕಲರ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಪಂ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನಗರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಂಗವಿಕಲರ ಕ್ರೀಡಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
 ಮನುಷ್ಯನ ದೇಹವು ಸಹ ಯಂತ್ರಗಳಂತೆ ಕೆಲಸ ನಿರ್ವಹಿಸುತ್ತದೆ. ನಮ್ಮ ದೇಹದ ಯಾವ ಅಂಗಕ್ಕೆ ಹೆಚ್ಚು ಕೆಲಸ ನೀಡುತ್ತೇವೋ ಅದು ಹೆಚ್ಚು ಕ್ರಿಯಾಶೀಲವಾಗಿರುತ್ತದೆ. ಪ್ರತಿದಿನ ಕ್ರೀಡೆಯಲ್ಲಿ ತೊಡಗುವುದರಿಂದ ಹೆಚ್ಚು ಲವಲವಿಕೆಯಿಂದ ಇರಲು ಸಾಧ್ಯ ಎಂದು ಹೇಳಿದರು.
 ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಪ್ರಮುಖವಾಗಿದೆ. ಇಲ್ಲವಾದರೆ ದೇಹ ಉತ್ತಮ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಕ್ರೀಡಾ ಸ್ಫೂರ್ತಿ ಪ್ರತಿಯೊಬ್ಬರಲ್ಲೂ ಇರಬೇಕು ಎಂದರು.
 ಮನೆಗಳು, ಶಾಲಾ-ಕಾಲೇಜುಗಳು ಹಾಗೂ ಕೆಲಸದ ಸ್ಥಳಗಳಲ್ಲಿ ಅಂಗವಿಕಲರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು ಹಾಗೂ ಅವರನ್ನು ಮನೆಯಿಂದ ಹೊರಹಾಕದೆ ಪ್ರೀತಿಯಿಂದ ನೋಡಿಕೊಳ್ಳಬೇಕು ಎಂದು ತಿಳಿಸಿದರು.
 ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಪಿ.ಮಂಜುಳಾ, ಮೋತಿ ವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಪಂಚಾಕ್ಷರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net