

ದಾವಣಗೆರೆ : ತಂಬಾಕು ಸೇವನೆ ತೀವ್ರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವುದು ಎಲ್ಲರ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ಮಂಜುನಾಥ ಆರ್. ಬರ್ದೂರ್ ಹೇಳಿದರು. ತಂಬಾಕು ನಿಷೇಧ ದಿನಾಚರಣೆಯ ಅಂಗವಾಗಿ ದಾವಣಗೆರೆಯ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ನೇತೃತ್ವದಲ್ಲಿ, ಚಿಗಟೇರಿ ಜಿಲ್ಲಾಸ್ಪತ್ರೆ, ಬಾಡ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಬಾಡ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಬಾಡ ಗ್ರಾಮದಲ್ಲಿ ಆಯೋಜಿಸಿದ್ದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಂದ್ರಮ್ಮ, ಪಿಡಿಒ ಶಾಂತ ಹಾಗೂ ಹಿರಿಯ ದಂತ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಾಡ ಗ್ರಾಮದ ಬೀದಿಗಳಲ್ಲಿ ಜಾಗೃತಿ ಜಾಥಾ, ವಿಶ್ವಾರಾಧ್ಯ ಆಸ್ಪತ್ರೆಯ ತಂಡದಿಂದ ಬಾಡದ ಸಂತೆಯಲ್ಲಿ ಬೀದಿ ನಾಟಕದ ಪ್ರಸ್ತುತಿ ಹಾಗೂ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಿ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಊರಿನ ಗಣ್ಯರು, ಗ್ರಾ.ಪಂ. ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.