17ರಂದು ಕಾಲೇಜು ಆರಂಭಿಸಲು ದಾವಣಗೆರೆ ವಿವಿ ಸಜ್ಜು

dvg prof. s.v. halase nov 13
Published on

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ನ. 17ರಂದು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.

ಆನ್‌ಲೈನ್‌ನಲ್ಲಿ ಶುಕ್ರವಾರ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸಂಲಗ್ನ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದ ಜತೆಗೆ ಅವರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷವನ್ನು 8 ತಿಂಗಳ ನಂತರ ಮತ್ತೆ ಆರಂಭಿಸಲಾಗುತ್ತಿದೆ ಎಂದರು.

ಯುಜಿಸಿ ಮತ್ತು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದ ಎಲ್ಲ ಸೂಚನೆ ಮತ್ತು ನಿಯಮಾವಳಿಗಳನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರಲು ಎಲ್ಲ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಆವರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ.

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಆರೋಗ್ಯದ ನಿರಂತರ ಮೇಲ್ವಿಚಾರಣೆಯ ಉದ್ದೇಶದಿಂದ ವಿಶ್ವವಿದ್ಯಾನಿಲಯ, ಸ್ನಾತಕೋತ್ತರ ಕೇಂದ್ರಗಳು ಮತ್ತು ಎಲ್ಲ ಕಾಲೇಜುಗಳಲ್ಲಿ ಕೋವಿಡ್ ನಿಯಂತ್ರಣ ಕೇಂದ್ರ ಸ್ಥಾಪಿಸಿ, ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತಿದೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳು ನಡೆಯಲಿವೆ. ಆನ್‌ಲೈನ್‌ನಲ್ಲೂ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ದೈಹಿಕವಾಗಿ ತರಗತಿಗೆ ಹಾಜರಾಗಲು ಇಚ್ಛಿಸುವ ವಿದ್ಯಾರ್ಥಿಗಳು ಕೋವಿಡ್-19 ಪರೀಕ್ಷೆಯ ಪ್ರಮಾಣಪತ್ರ ಪಡೆಯುವುದು ಕಡ್ಡಾಯ. ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ, ಪರಸ್ಪರ ಅಂತರ ಕಾಪಾಡುವುದರ ಜತೆಗೆ ವೈಯಕ್ತಿಕ ಜವಾಬ್ದಾರಿಯ ಬಗ್ಗೆ ಪಾಲಕರಿಂದ ಅನುಮತಿ ಪತ್ರವನ್ನೂ ಸಲ್ಲಿಸಬೇಕು.

ಸರ್ಕಾರ ಮತ್ತು ವಿಶ್ವವಿದ್ಯಾನಿಲಯದ ನಿಯಮಗಳನ್ನು ಪಾಲಿಸುವುದಾಗಿ ವೈಯಕ್ತಿಕ ಮುಚ್ಚಳಿಕೆ ಪತ್ರವನ್ನು ಬರೆದುಕೊಡುವುದನ್ನೂ ಕಡ್ಡಾಯ ಮಾಡಲಾಗಿದೆ. ವಿದ್ಯಾರ್ಥಿಗಳು ದೈಹಿಕವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ ಆನ್‌ಲೈನ್‌ನಲ್ಲೂ ಪಾಲ್ಗೊಳ್ಳಬಹುದು. ಹಾಜರಾತಿ ಕಡ್ಡಾಯಗೊಳಿಸಿಲ್ಲ. ಆರಂಭದಲ್ಲಿ ಬೋಧನೆಗೆ ಸೀಮಿತಗೊಳಿಸಿದ್ದು, ಹಂತಹಂತವಾಗಿ ಪ್ರಾಯೋಗಿಕ ತರಬೇತಿಗೆ ಆದ್ಯತೆ ನೀಡಲಾಗುವುದು ಎಂದು ವಿವರಿಸಿದರು.

ಕ್ಯಾಂಟೀನ್, ಹಾಸ್ಟೆಲ್, ಕಾಲೇಜು ಕೊಠಡಿಗಳಲ್ಲಿ ಪ್ರತಿ ದಿನವೂ ಸ್ಯಾನಿಟೈಸೇಷನ್ ಮಾಡುವುದು. ಕಿಟಕಿ, ಬಾಗಿಲುಗಳನ್ನು ಸ್ವಚ್ಛಗೊಳಿಸುವುದು, ಸ್ಪರ್ಶಿಸಲು ಅವಕಾಶವಿರದ ಕಸದ ತೊಟ್ಟಿಯ ವ್ಯವಸ್ಥೆ ಮಾಡಲಾಗುತ್ತಿದೆ. ಕುಡಿಯುವ ನೀರನ್ನು ವಿದ್ಯಾರ್ಥಿಗಳೇ ತರಬೇಕು. ಊಟ, ಉಪಾಹಾರದ ಸಂದರ್ಭದಲ್ಲೂ ಸರ್ಕಾರದ ನಿಮಯಗಳನ್ನು ಪಾಲಿಸಲೇಬೇಕು. ಇದರಲ್ಲಿ ಯಾವುದೇ ಲೋಪವಾದರೂ ಕಾಲೇಜಿನ ಪ್ರಾಂಶುಪಾಲರು ಮತ್ತು ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದು ತಿಳಿಸಿದರು.

ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕಾಲಕಾಲಕ್ಕೆ ಧ್ವನಿವರ್ಧಕ ಬಳಸಿ ಮಾಹಿತಿ ಕೊಡಬೇಕು. ಸಕಾಲಿಕ ಸರ್ಕಾರದ ಆದೇಶ, ಸೂಚನೆಗಳನ್ನು ನೀಡಬೇಕು. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಅಗತ್ಯವಿರುವ ಪೂರಕ ಮಾಹಿತಿಯನ್ನು ಒದಗಿಸಲು ಪ್ರಾಧ್ಯಾಪಕರು ಗಮನ ನೀಡಲು ತಿಳಿಸಲಾಗಿದೆ ಎಂದರು.

ಕುಲಸಚಿವ ಪ್ರೊ.ಬಸವರಾಜ ಬಣಕಾರ, ವಿವಿ ಕೋವಿಡ್ ನೋಡಲ್ ಅಧಿಕಾರಿ ಡಾ.ಶರತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net