ಸುಗಮ ಮತ ಎಣಿಕೆಗೆ ಸಮನ್ವಯ

ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಗುರುವಾರ, ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿ.ಎಂ. ಗಂಗಾಧರಸ್ವಾಮಿ, ಡಾ. ಎಚ್.ಟಿ. ಶೇಖರ್, ಶೀಲವಂತ ಶಿವಕುಮಾರ್, ಸಂತೋಷ್ ಕುಮಾರ್, ಮಮತ ಹೊಸಗೌಡರ್ ಇದ್ದರು.
ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಗುರುವಾರ, ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿ.ಎಂ. ಗಂಗಾಧರಸ್ವಾಮಿ, ಡಾ. ಎಚ್.ಟಿ. ಶೇಖರ್, ಶೀಲವಂತ ಶಿವಕುಮಾರ್, ಸಂತೋಷ್ ಕುಮಾರ್, ಮಮತ ಹೊಸಗೌಡರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ನಿರ್ದೇಶನ
  • ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ನಿರ್ದೇಶನ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಗುರುವಾರ, ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನಮುಕ್ತ ವಲಯ’ ಎಂದು ಘೋಷಿಸಲಾಗಿದೆ. ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯು ನಿಷೇಧಿತ ಪ್ರದೇಶವಾಗಿರುತ್ತದೆ. ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

ಮೂರು ಹಂತದ ಭದ್ರತಾ ವ್ಯವಸ್ಥೆ

ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದು ಗಂಗಾಧರ ಸ್ವಾಮಿ ತಿಳಿಸಿದರು.
ಮತ ಎಣಿಕೆ ಪ್ರಕ್ರಿಯೆಗೆ ಯಾವುದೆ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಯ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದರು.

ಮಳೆಯಿಂದ ರಕ್ಷಣೆ

ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಚಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೆ ಮರು ಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಇಂಜಿನಿರ್‌ಗಳಿಗೆ ಡಿಸಿ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸಿಸಿಟಿವಿ ಕ್ಯಾಮರಾಗಳ ಕಾರ್ಯಕ್ಷಮತೆ ಪರಿಶೀಲಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೆ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮರಾಗಳ ಕವರೇಜ್ ಇರಬೇಕು. ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ಸುಸಜ್ಜಿತ ಆಂಬುಲೆನ್ಸ್ ಇರಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮಮತ ಹೊಸಗೌಡರ್, ಡಿಎಚ್‌ಒ ಡಾ.ಷಣ್ಮುಖಪ್ಪ, ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ಉದಯ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net