ಬೆಳಲಗೆರೆ ದೇವಸ್ಥಾನ ಪ್ರವೇಶಿಸಿದ ದಲಿತ ಯುವಕರ ಮೇಲೆ ಹಲ್ಲೆ

ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ್ದರಿಂದ ಉದ್ವಿಗ್ನಗೊಂಡಿದ್ದ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪದ ಬೆಳಲಗೆರೆ ಗ್ರಾಮದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಶಾಂತಿಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಶೇಖರ್ ಎಚ್.ಟಿ, ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ ಸೇರಿ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. temple
ದಲಿತ ಯುವಕರು ದೇವಸ್ಥಾನ ಪ್ರವೇಶಿಸಿದ್ದರಿಂದ ಉದ್ವಿಗ್ನಗೊಂಡಿದ್ದ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪದ ಬೆಳಲಗೆರೆ ಗ್ರಾಮದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಶಾಂತಿಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಶೇಖರ್ ಎಚ್.ಟಿ, ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ ಸೇರಿ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. temple
Published on

ಪ್ರಮುಖ ಮುಖ್ಯಾಂಶಗಳು

  • ಗ್ರಾಮ ಉದ್ವಿಗ್ನ
  • 41 ಜನರ ವಿರುದ್ಧ ಪ್ರಕರಣ ದಾಖಲು
  • ಡಿಸಿ, ಎಸ್ಪಿ ನೇತೃತ್ವದಲ್ಲಿ ಶಾಂತಿ ಸಭೆ

ಬಸವಾಪಟ್ಟಣ: ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪದ ಬೆಳಲಗೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಅಜ್ಜಿ ಹಬ್ಬದ ಆಚರಣೆ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತ ಯುವಕರ ಮೇಲೆ ಇನ್ನೊಂದು ಸಮುದಾಯದವರು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ದಲಿತ ಸಮುದಾಯದ ಇಬ್ಬರು ಯುವಕರು ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನವನ್ನು ಪ್ರವೇಶಿಸಿ ಗಂಟೆ ಬಾರಿಸಿದ್ದಾರೆ ಎನ್ನಲಾಗಿದ್ದು, ಇದನ್ನು ಮತ್ತೊಂದು ಸಮುದಾಯದ ಕೆಲವರು ವಿರೋಧಿಸಿದ್ದಾರೆ.
ಈ ವೇಳೆ ಮಾತಿನ ಚಕಮಕಿ ನಡೆದು, ಶರತ್ ಎಂಬ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಕೈ ಕಾಲುಗಳಿಂದ ಹಲ್ಲೆ ನಡೆಸಲಾಗಿದೆ. ಬಿಡಿಸಲು ಬಂದ ಆತನ ಸ್ನೇಹಿತರಾದ ಮಹಾಂತೇಶ, ದರ್ಶನ, ಅರುಣ, ನಾಗರಾಜ, ಮಂಜುನಾಥ ಅವರ ಮೇಲೂ ಹಲ್ಲೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಾಯಾಳು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಈ ಕುರಿತು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ 41 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮಕ್ಕೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಎಸ್ಪಿ ಶೇಖರ್ ಎಚ್.ಟಿ, ಹೆಚ್ಚುವರಿ ಎಸ್ಪಿ ಪರಮೇಶ್ವರ ಹೆಗಡೆ, ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ ಸೇರಿ ಹಿರಿಯ ಅಧಿಕಾರಿಗಳು ಶನಿವಾರ ಭೇಟಿ ನೀಡಿ, ಶಾಂತಿ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾಹಿತಿ ಪಡೆಯಲಾಗಿದೆ. ಪ್ರಕರಣದ ಕುರಿತು ದೂರು ದಾಖಲಾಗಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮಾತನಾಡಿ, ಸಾರ್ವಜನಿಕ ಧಾರ್ಮಿಕ ಸ್ಥಳಗಳು ಸೇರಿ ಪ್ರತಿಯೊಂದು ಸಾರ್ವಜನಿಕ ಸ್ಥಳದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಸಣ್ಣ ವಿಚಾರಗಳನ್ನು ದೊಡ್ಡ ಗಲಾಟೆಯಾಗಿ ಪರಿವರ್ತಿಸದೆ ಗ್ರಾಮಸ್ಥರು ಸೌಹಾರ್ದದಿಂದ ಬದುಕಬೇಕು. ಅನಗತ್ಯ ವಿವಾದಗಳಿಂದ ಆಡಳಿತ ಹಾಗೂ ಸಾರ್ವಜನಿಕರ ಸಮಯ ವ್ಯರ್ಥವಾಗಬಾರದು. ಕಾನೂನು ಕೈಗೆತ್ತಿಕೊಳ್ಳುವ ಕಿಡಿಗೇಡಿಗಳನ್ನು ಗುರುತಿಸಿ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಉಪ ವಿಭಾಗದ ಪೊಲೀಸ್ ಅಧಿಕಾರಿ ರುದ್ರಪ್ಪ ಉಜ್ಜನಕೊಪ್ಪ ಮಾತನಾಡಿದರು.ಸಭೆಯಲ್ಲಿ ಚನ್ನಗಿರಿ ತಹಸೀಲ್ದಾರ್ ಎನ್. ನಾಗರಾಜ್, ಸಂತೇಬೆನ್ನೂರು ಸಿಪಿಐ ಮಲ್ಲಮ್ಮ ಚೌಬೆ, ಉಪ ವಿಭಾಗಾಧಿಕಾರಿ ಎಚ್.ಡಿ. ಚನ್ನಪ್ಪ, ಬಸವಾಪಟ್ಟಣ ಪಿಎಸ್‌ಐ ಇಮ್ತಿಯಾಜ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net