

ಜಗಳೂರು: ತಾಲೂಕಿನ 22 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ಬೀದಿ ದೀಪ ಅಳವಡಿಕೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ಬಾಕಿ ಇರುವ ಕೂಲಿ ಹಣ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಡಾ. ವಾಸುದೇವ ಮೇಟಿ ಬಣ) ನೇತೃತ್ವದಲ್ಲಿ ರೈತರು ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಶನಿವಾರ ಪ್ರತಿಭಟನೆ ಮಾಡಿದರು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು, ರೈತರು ಹಾಗೂ ಕೂಲಿ ಕಾರ್ಮಿಕರು ಕನಿಷ್ಠ ಮೂಲ ಸೌಕರ್ಯಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು, ಚರಂಡಿ ಸ್ವಚ್ಛತೆ ಹಾಗೂ ಬೀದಿ ದೀಪಗಳ ನಿರ್ವಹಣೆ ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಅತ್ಯಗತ್ಯ. ಆದರೆ ಪಂಚಾಯಿತಿಗಳ ನಿರ್ಲಕ್ಷೃದಿಂದಾಗಿ ಜನರು ಪರದಾಡುವಂತಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್ ದೂರಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ ಮಾತನಾಡಿ, ಕಳೆದ ಎರಡು ವರ್ಷಗಳಿಂದಲೂ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಸ್ವಚ್ಛತೆ ಮರೀಚಿಕೆಯಾಗಿದೆ. ಹಲವು ಗ್ರಾಮಗಳಲ್ಲಿ ಪಿಡಿಒಗಳು ಕಚೇರಿಯಲ್ಲಿದ್ದು ಕೆಲಸ ಮಾಡುತ್ತಿಲ್ಲ. ಸಾರ್ವಜನಿಕರು ಅಥವಾ ರೈತರು ಕರೆ ಮಾಡಿದರೆ ಫೋನ್ ಸ್ವೀಕರಿಸುವುದಿಲ್ಲ. ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪಿ.ಎಂ. ಮಹಾಂತೇಶ್, ಹಸಿರು ಸೇನೆ ಅಧ್ಯಕ್ಷ ಜಗದೀಶ್, ಗ್ರಾಮ ಘಟಕದ ಅಧ್ಯಕ್ಷ ಆಕನೂರು ಕಾಡಪ್ಪ, ಸೂರಪ್ಪ, ಚಂದ್ರಪ್ಪ, ಈರಪ್ಪ, ಚನ್ನಪ್ಪ, ಗುಂಡಪ್ಪ, ತಿಮ್ಮರಾಯಪ್ಪ, ಕರಿಬಸಪ್ಪ, ಪಾಲನಾಯಕ, ವೀರೇಶ್, ಕೆ.ಸಿ. ಬಸವರಾಜ್ ಇತರರಿದ್ದರು.