ಗುಡಾಳ್ ಗ್ರಾಮದ ಕುಡಿವ ನೀರಿನ ಸಮಸ್ಯೆ ನೀಗಿಸಿದ ಸಚಿವ

ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಪೂರೈಕೆ
WATER
ಖಾಸಗಿ ಬೋರ್‌ವೆಲ್ ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡುವ ಮೂಲಕ ಗ್ರಾಮಸ್ಥರ ನೀರಿನ ಸಮಸ್ಯೆ ನೀಗಿಸಿದ ಸಚಿವರು.WATER
Published on: 

ಮಾಯಕೊಂಡ: ಆನಗೋಡು ಹೋಬಳಿಯ ಗುಡಾಳ್ ಗ್ರಾಮದ ಜನರ ಕುಡಿಯುವ ನೀರಿನ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಕೆ.ಎಸ್. ಬಸವಂತಪ್ಪ, ಖಾಸಗಿ ಬೋರ್‌ವೆಲ್ ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡುವ ಮೂಲಕ ಸಮಸ್ಯೆ ಪರಿಹರಿಸಿದ್ದಾರೆ.

ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಮನೆಗಳಿದ್ದು, ಇಡೀ ಗ್ರಾಮಕ್ಕೆ ಒಂದೇ ಬೋರ್‌ವೆಲ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿತ್ತು. ಆದರೆ, ಈ ಬೋರ್‌ವೆಲ್‌ನಿಂದ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿರಲಿಲ್ಲ. ಹೀಗಾಗಿ ಆಕ್ರೋಶಗೊಂಡ ಗ್ರಾಮಸ್ಥರು ಮಂಗಳವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದರು.

ವಿಷಯ ತಿಳಿದ ಸಚಿವ ಕೆ.ಎಸ್. ಬಸವಂತಪ್ಪ, ಬುಧವಾರ ಗುಡಾಳ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿ, ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಕಾರ್ಯಪ್ರವೃತ್ತರಾದರು. ಗ್ರಾಮದಲ್ಲಿ ಲಭ್ಯವಿರುವ ಖಾಸಗಿ ಬೋರ್‌ವೆಲ್ ಮಾಲೀಕರೊಂದಿಗೆ ಮಾತುಕತೆ ನಡೆಸಿದ ಸಚಿವರು, ತಿಂಗಳ ಬಾಡಿಗೆ ಆಧಾರದಲ್ಲಿ ಒಪ್ಪಂದ ಮಾಡಿಕೊಂಡರು. ಬಾಡಿಗೆಗೆ ಸಂಬಂಧಿಸಿದ ಮುಂಗಡ ಹಣವನ್ನು ವೈಯಕ್ತಿಕವಾಗಿ ಪಾವತಿಸಿ, ತಕ್ಷಣ ನೀರು ಪೂರೈಕೆ ಮಾಡಿದರು.

ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆ ಇಂಜಿನಿಯರ್ ಮಾಳಪ್ಪ, ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಮಲ್ಲೇಶ್ ನಾಯ್ಕ, ಪಿಡಿಒ ಸುರೇಶ್, ಗ್ರಾಮಸ್ಥರಾದ ವೆಂಕಟೇಶಪ್ಪ, ಶಂಭುಲಿಂಗಪ್ಪ ಇತರರಿದ್ದರು.

ನೀರಿನ ಸಮಸ್ಯೆ ದೂರು ಬರಬಾರದು

ರಾಜ್ಯ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಅನುದಾನ ಮೀಸಲಿಟ್ಟಿದ್ದು, ಅಂತರ್ಜಲ ಇರುವ ಕಡೆ ಹೊಸ ಬೋರ್ ವೆಲ್ ಕೊರೆಸಬೇಕು. ಅಂತರ್ಜಲ ಲಭ್ಯವಿಲ್ಲದ ಕಡೆ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಜನರಿಗೆ ಕುಡಿಯುವ ನೀರು ಪೂರೈಸಬೇಕು ಎಂದು ಸಚಿವ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಸೂಚಿಸಿದರು.ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಅಧಿಕಾರಿಗಳು ನಿರ್ಲಕ್ಷೃ ವಹಿಸದೆ ಪರಿಹಾರ ಒದಗಿಸ ಬೇಕು. ಮುಂದಿನ ದಿನಗಳಲ್ಲಿ ಬೇಸಿಗೆ ಆರಂಭವಾಗುವುದರಿಂದ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸುವ ಸಾಧ್ಯತೆಯಿದೆ. ಹೀಗಾಗಿ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.