ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

dvg-congres-06-1.jpg
Published on

ದಾವಣಗೆರೆ : ಕೇಂದ್ರ ಸರ್ಕಾರ ಬಡವರ ಹಣ ದೋಚಲು ಮುಂದಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
 ಕೆ.ಆರ್. ರಸ್ತೆಯಲ್ಲಿರುವ ಎಲ್ಐಸಿ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.
 ಕೇಂದ್ರದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಜನರಿಗೆ ಮಂಕುಬೂದಿ ಎರಚಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ ಯುವಜನರನ್ನು ವಂಚಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ದೂರಿದರು.
 ಬಡವರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿ ಜನರಿಗೆ ದ್ರೋಹ ಬಗೆದಿದ್ದಾರೆ. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
 ಬಿಜೆಪಿಯವರು ದೇಶವನ್ನು ದಿವಾಳಿಯತ್ತ ನೂಕುತ್ತಿದ್ದಾರೆ. ಬಿಎಸ್‌ಎನ್‌ಎಲ್ ಅನ್ನು ಖಾಸಗೀಕರಣ ಮಾಡಲು ಮುಂದಾಗಿದ್ದು, ಇದೀಗ ಜೀವ ವಿಮಾ ನಿಗಮವನ್ನು ಅದಾನಿ ಸಮೂಹಕ್ಕೆ ಮಾರಾಟ ಮಾಡಿ ಷೇರು ಮಾರುಕಟ್ಟೆಯಲ್ಲಿ ಮನ ಬಂದಂತೆ ಏರಿಳಿತ ಮಾಡಿಸುವ ದಂಧೆಯಲ್ಲಿ ತೊಡಗಿದ್ದಾರೆ. ಎಲ್ಐಸಿಯಲ್ಲಿ ಹಣ ತೊಡಗಿಸಿದ ಜನರಿಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಿದೆ ಎಂದು ಹರಿಹಾಯ್ದರು.
 ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ, ಬಡವರು ಉಳಿತಾಯದ ದೃಷ್ಟಿಯಿಂದ ಎಲ್ಐಸಿ ಮತ್ತು ಎಸ್‌ಬಿಐನಲ್ಲಿ ಹಣ ತೊಡಗಿಸಿದ್ದಾರೆ. ಆದರೆ ಇದನ್ನು ಕೇಂದ್ರ ಸರ್ಕಾರ ಅದಾನಿ ಸಮೂಹದಲ್ಲಿ ತೊಡಗಿಸಿ ಬಡವರ ಹಣವನ್ನು ದೋಚಲು ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿದರು.
 ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮುಖಂಡರಾದ ಕೆ.ಜಿ.ಶಿವಕುಮಾರ್, ಬಿ.ಕೆ.ಪರಶುರಾಮ್, ಜಿ.ಸಿ. ನಿಂಗಪ್ಪ, ಎಸ್. ಮಲ್ಲಿಕಾರ್ಜುನ, ಆರೀಫ್, ಮೈನುದ್ದೀನ್, ಸುಭಾನ್, ಚಂದ್ರು ಡೋಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net