

ದಾವಣಗೆರೆ : ನಾಡು, ನುಡಿ, ಭಾಷೆ, ಸಂಸ್ಕೃತಿಯ ರಕ್ಷಣೆ ಹಾಗೂ ಕನ್ನಡದ ಅಭಿವೃದ್ಧಿಗೆ ರಾಜ್ಯದಲ್ಲಿ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.
ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೆಲಸ ಮಾಡುತ್ತಿದೆ. 1 ರಿಂದ 10ನೇ ತರಗತಿಯ ವರೆಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತಂದಿರುವ ರಾಜ್ಯ ನಮ್ಮದು ಎಂದರು.
ಸರ್ಕಾರವು ಪುಸ್ತಕೋದ್ಯಮವನ್ನು ಜನಪರವಾಗಿ ರೂಪಿಸಿ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಾನಪದ ಅಕಾಡೆಮಿ, ಲಲಿತಕಲಾ ಅಕಾಡೆಮಿ, ಸಂಗೀತ, ನೃತ್ಯ ಅಕಾಡೆಮಿ, ಬಯಲಾಟ ಅಕಾಡೆಮಿಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಮೈಸೂರು, ಧಾರವಾಡ, ಕಲಬುರಗಿ, ಶಿವಮೊಗ್ಗ, ದಾವಣಗೆರೆ, ಕಾರ್ಕಳದಲ್ಲಿ ರಂಗಾಯಣಗಳನ್ನು ಸ್ಥಾಪಿಸಿ ನಾಡಿನ ಸಾಹಿತ್ಯ, ಸಂಸ್ಕೃತಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.