ಪದವಿ ಪರೀಕ್ಷೆ ಮುಂದೂಡಲು ಆಗ್ರಹಿಸಿ ಎಐಡಿಎಸ್‌ಒ ಪ್ರತಿಭಟನೆ

1001207738.jpg
Published on

ದಾವಣಗೆರೆ: ಪದವಿ ಪಾಠಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ದಾವಣಗೆರೆ ವಿವಿಯು ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಮುಂದಿನ ವಾರ ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದೆ. ಆದರೆ, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇದುವರೆಗೆ ತರಗತಿಗಳು ಸರಿಯಾಗಿ ನಡೆದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ ಎಂದು ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಹೇಳಿದರು.

ಹಿಂದಿನ ಶೈಕ್ಷಣಿಕ ವರ್ಷದ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿ ಹೋರಾಟದ ಅಭೂತಪೂರ್ವ ಜಯವಾಗಿದೆ ಎಂದು ಹೇಳಿದರು.

ಪ್ರತಿ ವಿಷಯಕ್ಕೆ ಕನಿಷ್ಠ 30 ಗಂಟೆಗಳ ಪಾಠ ಆಗದೆ ಪರೀಕ್ಷೆಗಳನ್ನು ಘೋಷಿಸಿರುವುದು ಅನ್ಯಾಯವಾಗಿದೆ. ಪಾಠ ನಡೆಯದೇ ಪರೀಕ್ಷೆ ನಡೆಸಬಾರದು. ಪರೀಕ್ಷೆ ಹಾಗೂ ಪರೀಕ್ಷಾ ಶುಲ್ಕದ ಸುತ್ತೋಲೆ ಹಿಂಪಡೆಯಬೇಕು. ಕಾಲೇಜುಗಳಲ್ಲಿಯೂ ಆಂತರಿಕ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಟಿ.ಎಸ್.ಸುಮನ್, ಜಿಲ್ಲಾ ಸಂಘಟನಾಕಾರ ಎಚ್.ಡಿ.ಗಂಗಾಧರ್, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಾದ ಸಿದ್ಧಿಕ್ ಆವರಗೆರೆ, ಎಂ.ಆರ್.ವಿಕಾಸ್, ಎನ್. ಗಂಗಾಧರ್, ಪ್ರೇಮಾ, ವರಲಕ್ಷ್ಮಿ ಇತರರಿದ್ದರು. ನಂತರ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಿಗೆ ವಿದ್ಯಾರ್ಥಿಗಳ ನಿಯೋಗವು ಮನವಿಪತ್ರ ಸಲ್ಲಿಸಿತು.

----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net