

ದಾವಣಗೆರೆ : ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂ. 4ರಂದು ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಎಣಿಕೆ ಕೇಂದ್ರವಾದ ದಾವಣಗೆರೆ ವಿವಿ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ನಾಗರೀಕ ಪೊಲೀಸ್ ಅಧಿಕಾರಿ ಸಿಬ್ಬಂದಿ ಸೇರಿ ಜಿಲ್ಲಾ ಪೊಲೀಸ್ ಮೀಸಲು ಪಡೆ- 8 ತುಕಡಿ, ಐಟಿಪಿಬಿ-1 ತುಕಡಿ , ರಾಜ್ಯ ಮೀಸಲು ಪಡೆ-4 ತುಕಡಿ ಮತ್ತು ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿಡಿಯೋಗ್ರಾಫರ್ಸ್, ಡ್ರೋಣ್ ಕ್ಯಾಮರಾಗಳ ಕಣ್ಗಾವಲು ಇರಲಿದೆ.
ಪೊಲೀಸ್ ಠಾಣಾ ವ್ಯಾಪ್ತಿಗಳ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲಾ ಠಾಣಾ ವ್ಯಾಪ್ತಿಯ ರೌಡಿ, ಗೂಂಡಾ ಹಾಗೂ ಮತೀಯ ಗೂಂಡಾಗಳಿಂದ ಮತ ಎಣಿಕೆ ಸಮಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನಡವಳಿಕೆ ಹೊಂದಿರಲು ಎಚ್ಚರಿಕೆ ನೀಡಲಾಗಿದೆ.
ನಾಗರಿಕರಿಗೆ ಸಲಹೆ
ಮತ ಎಣಿಕೆ ದಿನದಂದು ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಕಂಡುಬಂದಲ್ಲಿ ಸಾರ್ವಜನಿಕರು ತುರ್ತು ಸಹಾಯವಾಣಿ 112 ನಂಬರ್ ಕರೆ ಮಾಡಬೇಕು. ಸ್ಥಳೀಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಬೇಕು. ಜೂ. 4ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ. ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಜೂ.4ರ ಬೆಳಗ್ಗೆ 6ರಿಂದ ಜೂ.5ರ ಬೆಳಗ್ಗೆ 7ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು ಜಿಲ್ಲೆೆಯಾದ್ಯಂತ 5 ಕ್ಕಿಂತ ಹೆಚ್ಚು ವ್ಯಕ್ತಿಗಳು ಒಂದೆಡೆ ಗುಂಪುಗೂಡುವಂತಿಲ್ಲ. ಮೆರವಣಿಗೆ, ಪಟಾಕಿ ಸಿಡಿಸಲು ಅವಕಾಶವಿಲ್ಲ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾಯ್ದಿರಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ, ನಿಂದನಾತ್ಮಕ ಪೋಸ್ಟರ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮತ ಎಣಿಕೆ ಕೇಂದ್ರಕ್ಕೆ ಆಗಮಿಸುವ ಸಾರ್ವಜನಿಕರು/ಏಜೆಂಟರು ಜಿಲ್ಲಾ ಚುನಾವಣಾಧಿಕಾರಿಗಳಿಂದ ಪಡೆದ ಗುರುತಿನ ಪತ್ರ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.