ನ.2ಕ್ಕೆ ಕನ್ನಡ ಗೀತೆಗಳ ನೃತ್ಯ ಸ್ಪರ್ಧೆ

1001279413.jpg
Published on

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಗರದ ಕುವೆಂಪು ಕನ್ನಡ ಭವನದಲ್ಲಿ ನ. 2ರಂದು ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಗೀತೆಗಳ ನೃತ್ಯ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಅಂದು ಮಧ್ಯಾಹ್ನ 2 ಗಂಟೆಯಿಂದ ಗುಂಪು ನೃತ್ಯ ಸ್ಪರ್ಧೆಗಳು ನಡೆಯಲಿವೆ. 16 ವರ್ಷ ಮೇಲ್ಪಟ್ಟವರು ಹೆಸರು ನೋಂದಾಯಿಸಬಹುದು. ನೌಕರರೂ ಒಳಗೊಂಡಂತೆ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರೂ ಭಾಗವಹಿಸಬಹುದು ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈಗಾಗಲೆ 25 ತಂಡಗಳು ಹೆಸರು ನೊಂದಾಯಿಸಿವೆ. ಒಂದು ಪ್ರದರ್ಶನಕ್ಕೆ 8 ನಿಮಿಷಗಳ ಕಾಲಾವಕಾಶವಿದೆ. ಸ್ಪರ್ಧೆಗೆ ಅಗತ್ಯ ಪಕ್ಕಾ ವಾದ್ಯ ಇತರೆ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು. ಕ್ರಮವಾಗಿ ಪ್ರಥಮ ಬಹುಮಾನ 25 ಸಾವಿರ ರೂ., ದ್ವಿತೀಯ 15 ಸಾವಿರ ರೂ., ತೃತೀಯ ಬಹುಮಾನ 10 ಸಾವಿರ ರೂ. ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.

ಅಂದು ಸಂಜೆ 4ಕ್ಕೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಭಾಗವಹಿಸುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ, ಬಿ.ಪಾಲಾಕ್ಷಿ, ಬಿ.ಆರ್.ತಿಪ್ಪೇಸ್ವಾಮಿ, ಬಿ. ದಿಳ್ಯೆಪ್ಪ, ಜಿ. ಓಬಳಪ್ಪ ಇದ್ದರು.

---

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net