ಭದ್ರಾ ಸಲಹಾ ಸಮಿತಿ ತುರ್ತುಸಭೆ  ಜಿಲ್ಲಾ ಬಿಜೆಪಿ ರೈತ ಮೋರ್ಚಾ ಮನವಿ

1000242075.jpg
Published on

ದಾವಣಗೆರೆ: ತುರ್ತಾಗಿ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಡೆಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಡಿ ಮುಖಂಡರ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರಿಗೆ ಮನವಿ ಸಲ್ಲಿಸಿತು.
ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಬೇಸಿಗೆ ಹಂಗಾಮಿನಲ್ಲಿ ಭೀಕರ ಬಿಸಿಲಿನ ತಾಪಮಾನದಿಂದ ಬಸವಳಿದಿದ್ದ ಅನ್ನದಾತರು ಭತ್ತದಬೀಜ ಬಿತ್ತನೆಗೆ ಸಜ್ಜಾಗಿರುವ ಅನ್ನದಾತರು  ಡ್ಯಾಂನ ಒಳಹರಿವಿನ ಪ್ರಮಾಣದತ್ತ ಚಾತಕ ಹಕ್ಕಿಯಂತೆ ಗಮನ ಹರಿಸಿದ್ದಾರೆ.
ಇಂದು ಭದ್ರಾ ಡ್ಯಾಂನ ಒಳಹರಿವು 27839 ಕ್ಯೂಸೆಕ್ ಇದ್ದು, ನೀರಿನ ಮಟ್ಟ 144 ಅಡಿ 7 ಇಂಚು ಇದೆ. 30.142 ಟಿ.ಎಂ.ಸಿ ಯಷ್ಟು ನೀರಿನ ಸಂಗ್ರಹ ಇದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದೆ. ಹೀಗಾಗಿ ಈ ಸಲ ಡ್ಯಾಂ ತುಂಬುತ್ತದೆ ಎಂದು ರೈತರಲ್ಲಿ ಭರವಸೆ ಮೂಡಿದೆ. ಇದರಿಂದ ಜಿಲ್ಲೆಯ 65847 ಹೆ. ಪ್ರದೇಶದಲ್ಲಿ ಭತ್ತ ಬೆಳೆಯಲು ಅಣಿಯಾಗುತ್ತಿದ್ದಾರೆ.
ತಕ್ಷಣ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಡೆಸಬೇಕು. ಭದ್ರಾ ಡ್ಯಾಂನಲ್ಲಿ ನೀರಿನ ಲಭ್ಯತೆಗೆ ಅನುಸಾರ ನೀರು ಬಿಡುವ ನಿರ್ಧಾರ ಮಾಡಬೇಕು. ಸ್ಲೂಯಿಸ್‌ಗೇಟ್ ಮೂಲಕ ನೀರು ಸೋರಿಕೆಯಾಗುತ್ತಿದೆ. ಸೋರಿಕೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಲೂಯಿಸ್ ಭದ್ರತೆ ಬಗ್ಗೆ ಸ್ಪಷ್ಟನೆ ನೀಡಬೇಕು.
1962ರಲ್ಲಿ ಗಾರೆ, ಸುಣ್ಣ ಮತ್ತು ಕಲ್ಲು ಬಳಸಿ ನಿರ್ಮಿಸಲಾದ ಭದ್ರಾ ಡ್ಯಾಂ ತಳಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದು ಅದನ್ನು ತಡೆಗಟ್ಟಬೇಕು. ಹಳೆಯದಾದ ಡ್ಯಾಂ ಗೇಟ್‌ಗಳನ್ನು ಸರಿಪಡಿಸಿ, ಗಟ್ಟಿಗೊಳಿಸಬೇಕು. ಜರ್ಮನ್ ತಂತ್ರಜ್ಞಾನದಡಿ ಸಿದ್ಧಪಡಿಸಿರುವ ಡ್ಯಾಂ ನಿರ್ವಹಣೆಯ ಕ್ರೇನ್‌ಗಳನ್ನು ರೀ ಕಂಡೀಷನ್ ಮಾಡಿಸಬೇಕು. ಸೇತುವೆ ಬಳಿ ಆಗಾಗ ಕುಸಿಯುವ ತಡೆಗೋಡೆಗಳನ್ನು ಸರಿಪಡಿಸಿ, ಭದ್ರಗೊಳಿಸಬೇಕು. ಡ್ಯಾಂನ ಸುತ್ತಲೂ ಬೇಲಿ ನಿರ್ಮಿಸಿ ಸುಭದ್ರತೆ ಕಾಪಾಡಬೇಕು.
ಡ್ಯಾಂನ ಸುರಕ್ಷತೆಯ ಮೇಲ್ವಿಚಾರಣೆ ನಡೆಸುವ ಕೇಂದ್ರದ ಜಲ ಆಯೋಗ ಡ್ಯಾಂನ ಪುನರುತ್ಥಾನ ಮತ್ತು ಅಭಿವೃದ್ಧಿ ಯೋಜನೆ ಅಡಿಯಲ್ಲಿ ಡ್ಯಾಂನ ಸುರಕ್ಷತೆಗೆ 100 ಕೋಟಿ ರೂ. ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ ರಾಜ್ಯ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಲಾರದೆ, ಕರ್ನಾಟಕ ನೀರಾವರಿ ನಿಗಮದ ಮೂಲಕ ಕೇಂದ್ರ ಸರ್ಕಾರಕ್ಕೆ ಮೋರೆ ಹೋಗಿ ಕೈಕಟ್ಟಿ ಕುಳಿತಿರುವುದು ಸರಿಯಲ್ಲ. ಕೂಡಲೇ ಹಣ ಬಿಡುಗಡೆ ಮಾಡಿ, ಡ್ಯಾಂನ ಸುರಕ್ಷತೆ ಕಾಪಾಡಬೇಕು ಎಂದು ಒತ್ತಾಯಿಸಿದರು.
ಐಸಿಸಿ ಅಧ್ಯಕ್ಷ, ಸಚಿವ ಮಧು ಬಂಗಾರಪ್ಪ ಹಾಗೂ ಶಿವಮೊಗ್ಗದ ಜಿಲ್ಲಾಧಿಕಾರಿ ಭೇಟಿ ಮಾಡಿ ಐಸಿಸಿ ಸಭೆ ಕರೆಯಲು ಮನವಿ ಮಾಡುವುದಾಗಿ ಡಿಸಿ ಹೇಳಿದರು.
ನಿಯೋಗದಲ್ಲಿ ಬಿಜೆಪಿಯ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಜಿಲ್ಲಾ ವಕ್ತಾರ ಕೊಳೇನಹಳ್ಳಿ ಬಿ.ಎಂ. ಸತೀಶ್, ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳ್, ಮಾಜಿ ಮೇಯರ್ ಎಚ್.ಎನ್. ಗುರುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಕುಂಡುವಾಡ ಗಣೇಶಪ್ಪ,. ವಾಟರ್ ಮಂಜುನಾಥ, ಮತ್ತಿ ಪಿ.ಎಂ. ಮಂಜುನಾಥ, ಹೂವಿನಮಡು ಪ್ರಭು, ರೇವಣಸಿದ್ದಪ್ಪ, ಎಚ್.ಜಿ.ಮಂಜಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net