ಸರ್ಕಾರದಿಂದ ರೈತರ ಉದಾಸೀನ    ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ

1000547411.jpg
Published on

ದಾವಣಗೆರೆ: ರಾಜ್ಯ ಸರ್ಕಾರ ರೈತರ ಬಗ್ಗೆ ತಳೆದಿರುವ ನಿರ್ಲಕ್ಷೃ ಧೋರಣೆ ವಿರೋಧಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಡಿ. 13ರಂದು ಮುತ್ತಿಗೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಕಾಂಗ್ರೆಸ್, ವಿಧಾನಸಭಾ ಚುನಾವಣೆಗೂ ಮುನ್ನ ಕೃಷಿ ಸಂಬಂಧ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಘೋಷಣೆಗಳನ್ನು ಮರೆತಿದೆ. ರೈತಪರ ಸರ್ಕಾರ ಎಂಬ ಹೇಳಿಕೆ  ಬಾಯಿಮಾತಿಗೆ ಸೀಮಿತವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನುಷ್ಠಾನಗೊಂಡ ಕೃಷಿ ಸಂಬಂಧಿ ಕಾನೂನುಗಳನ್ನು ಸಿದ್ದರಾಮಯ್ಯ ಟೀಕಿಸಿದ್ದರು. ಅಧಿಕಾರ ಹಿಡಿದು ಒಂದೂವರೆ ವರ್ಷವಾದರೂ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಯ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಬಗರ್‌ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡಿಲ್ಲ ಎಂದು ಕಿಡಿ ಕಾರಿದರು.
ರೈತರ ವಿಚಾರದಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವ್ಯತ್ಯಾಸವಿಲ್ಲ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಲ್ಲಿ ದೇಶದ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಡಾ.ಸ್ವಾಮಿನಾಥನ್ ಆಯೋಗದ ವರದಿಯ ಮಾನದಂಡದ ಪ್ರಕಾರ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ಇದಕ್ಕೆ ಕಾನೂನು ಚೌಕಟ್ಟಿನ ಅಗತ್ಯವಿದ್ದು, ಇದು ಶಾಸನಬದ್ಧವಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ರೈತರು ಸೇರಿ ಜನ ಆಸ್ತಿ ವಿಚಾರದಲ್ಲಿ ವಕ್ಫ್ ಮಂಡಳಿಯು ಅನೇಕರಿಗೆ ನೋಟಿಸ್ ನೀಡಿದೆ. ರೈತರ ಪರವಾಗಿ ಪಹಣಿ ತಿದ್ದುಪಡಿ ಪ್ರಕ್ರಿಯೆ ಮಂದಗತಿಯಲ್ಲಿ ನಡೆಯುತ್ತಿದೆ. ಸರ್ಕಾರದ ಈ ಕ್ರಮದಿಂದ ರೈತರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ಸಣ್ಣ ರೈತರಿಗೆ ಕಿರುಕುಳ ನೀಡುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.
ವಿದ್ಯುತ್ ಕ್ಷೇತ್ರ ಖಾಸಗೀಕರಣ ಮಾಡುವ ಬಿಜೆಪಿಯ ಪ್ರಯತ್ನಕ್ಕೆ ಕಾಂಗ್ರೆಸ್ ಸಹಕಾರ ನೀಡುತ್ತಿದೆ. ರಾಜ್ಯದಲ್ಲಿ ಖಾಸಗೀಕರಣ ಪ್ರಕ್ರಿಯೆ ಆರಂಭವಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ರೈತರು ಸೌರ ವಿದ್ಯುತ್ ಬಳಕೆ ಮಾಡಿಕೊಳ್ಳುವಂತೆ ಸೂಚಿಸಲಾಗುತ್ತಿದೆ. ಮುಂಬೈ ಮಾದರಿಯಲ್ಲಿ ಮನೆಗಳಿಗೆ ಪ್ರೀಪೇಯ್ಡ ವಿದ್ಯುತ್ ಮೀಟರ್ ಕಡ್ಡಾಯಗೊಳಿಸುವ ಹುನ್ನಾರ ನಡೆದಿದೆ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಶತಕೋಟಿ ಬಸಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರನಾಯ್ಕ,ಕಾರ್ಯದರ್ಶಿ ಎನ್.ಬಸವರಾಜ್ ದಾಗಿನಕಟ್ಟೆ, ಗಣೇಶ್ ಇದ್ದರು.
----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net