

ದಾವಣಗೆರೆ: ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ರಾಜಿಯಾಗಬಲ್ಲ ಪ್ರಕರಣಗಳನ್ನು ಸಾರ್ವಜನಿಕರು ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ಈ ಕಾರ್ಯಕ್ರಮ ನಡೆಯಲಿದೆ. ರಾಜಿ ಸಂಧಾನ ಪ್ರಕ್ರಿಯೆಯಿಂದ ಉಭಯ ಕಕ್ಷಿದಾರರಿಗೆ ಸಮಯ, ಹಣ ಉಳಿತಾಯವಾಗುವ ಜತೆಗೆ ಶೀಘ್ರ ನ್ಯಾಯ ಸಿಗಲಿದೆ ಎಂದು ಹೇಳಿದರು.
ರಾಜಿಯಾಗಬಲ್ಲ ಸುಮಾರು 5 ರಿಂದ 6 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಇದೆ. 2019ರ ಅಂತ್ಯದವರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 40,713 ಪ್ರಕರಣಗಳು ಬಾಕಿ ಇವೆ. ಈ ಪೈಕಿ ರಾಜಿಯಾಗಬಲ್ಲ 8871 ಪ್ರಕರಣಗಳನ್ನು ಗುರುತಿಸಿ ಉಲ್ಲೇಖ ಮಾಡಲಾಗಿದೆ ಎಂದರು.
ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ ಮೊದಲಾದ ವ್ಯಾಜ್ಯಪೂರ್ವ ಕೇಸ್‌ಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಬಹುದು. ಸಣ್ಣ ಪುಟ್ಟ ವ್ಯಾಜ್ಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಿಕೊಳ್ಳಬಹುದು. ನ್ಯಾಯಾಲಯಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂಬುದನ್ನು ಜನರಲ್ಲಿ ಅರಿವು ಮೂಡಿಸಿದರೆ ಕೋರ್ಟ್‌ಗಳಲ್ಲಿ ಕೇಸ್‌ಗಳ ದಟ್ಟಣೆ ಕಡಿಮೆಯಾಗಲಿದೆ. ಆಸಕ್ತರು ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂರವಾಣಿ ಸಂಖ್ಯೆ 08192-296364 ಇಲ್ಲಿಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.
ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ಮತ್ತು ರಾಜಿಯಾಗಬಲ್ಲ ಪ್ರಕರಣಗಳ ಬಗ್ಗೆ ಜು.29 ರಿಂದ ಆಗಸ್ಟ್ 3 ರವರೆಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ. ಜಿಲ್ಲೆಯ ಒಟ್ಟು 31 ಪ್ರಕರಣಗಳಿವೆ. ಲೋಕ ಅದಾಲತ್‌ನಲ್ಲಿ ಕಕ್ಷಿದಾರರು ರಾಜಿಯಾಗಲು ಒಪ್ಪದಿದ್ದಲ್ಲಿ ಸುಪ್ರೀಂಕೋರ್ಟ್ ಹಂತದಲ್ಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥಪಡಿಸಲೂ ಅವಕಾಶವಿದೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ನಿವೇದಿತಾ, ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಬಸವರಾಜ್ ಇದ್ದರು.
----