

ದಾವಣಗೆರೆ: ಜಿಲ್ಲೆಯ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಹಾಸ್ಟೆಲ್‌ಗಳಲ್ಲಿ ಪೌಷ್ಟಿಕ ಆಹಾರ ವಿತರಿಸುವ ಜತೆಗೆ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೂಚಿಸಿದರು.
ಗೃಹಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಹಲವು ವಸತಿನಿಲಯಗಳಲ್ಲಿ ಆಹಾರ ವಿತರಣೆಯಲ್ಲಿ ದೋಷ ಮತ್ತು ಅನೈರ್ಮಲ್ಯದ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇನ್ನು ಮುಂದೆ ಅದಕ್ಕೆಲ್ಲ ಅವಕಾಶ ನೀಡಬಾರದು. ನಿಲಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂದರು.
ಜಿಲ್ಲೆಯ ವಿವಿಧೆಡೆ ಹಾಸ್ಟೆಲ್‌ಗಳಿಗೆ ಮುಂದಿನ ದಿನದಲ್ಲಿ ಅನಿರೀಕ್ಷಿತ ಭೇಟಿ ನೀಡಲಿದ್ದು, ಆಗ ಆಹಾರದಲ್ಲಿ ಲೋಪ ಹಾಗೂ ಶುಚಿತ್ವದ ಸಮಸ್ಯೆ ಕಂಡುಬಂದಲ್ಲಿ ಸೂಕ್ತ ಕ್ರಮ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.
ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಸೂಕ್ತ ರೀತಿಯಲ್ಲಿ ವಿತರಿಸಬೇಕು, ಸಂಗೀತ ಮತ್ತಿತರೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಲು ಪ್ರೋತ್ಸಾಹಿಸಬೇಕು. ಈ ಬಾರಿಯ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ವಸತಿನಿಲಯಗಳ ವಿದ್ಯಾರ್ಥಿಗಳು ಭಾಗಿಯಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.
ಎಸ್.ಎಸ್.ಕೇರ್ ಟ್ರಸ್ಟ್‌ನಿಂದ ವಿವಿಧೆಡೆ ಆರೋಗ್ಯ ಶಿಬಿರಗಳನ್ನು ನಡೆಸಿಕೊಂಡು ಬರುತ್ತಿದ್ದು, ಹಾಸ್ಟೆಲ್ ನಿಲಯಾರ್ಥಿಗಳಿಗೂ ಸಹ ದಂತ ಮತ್ತು ಆರೋಗ್ಯ ಶಿಬಿರಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ, ಬಿಸಿಎಂ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯಾ ಸಮಾಜದ ಬಡವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಕಾರ್ಯಕ್ರಮ ರೂಪಿಸಬೇಕು. ಯಾವುದೇ ಲಂಚಗುಳಿತನಕ್ಕೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್, ಬಿಸಿಎಂ ಇಲಾಖಾಧಿಕಾರಿ ಗಾಯತ್ರಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬೇಬಿ ಸುನೀತಾ ಇತರರಿದ್ದರು.