

ದಾವಣಗೆರೆ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆಗಳಲ್ಲಿ ಮಾದಕ ವಸ್ತುಗಳ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ನಗರಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಮಾದಕ ವ್ಯಸನಕ್ಕೆ ಸಿಲುಕುವ ಅಪಾಯ ಹೆಚ್ಚಾಗಿರುತ್ತದೆ. ವಿದ್ಯಾರ್ಥಿಗಳೇ ವ್ಯಸನಿಗಳಾದರೆ ಮುಂದಿನ ಪೀಳಿಗೆಯ ಗತಿ ಏನಾಗಲಿದೆ? ಎಂದು ಆತಂಕ ವ್ಯಕ್ತಪಡಿಸಿದರು.
ಮಾದಕಗಳಿಂದ ಮನಸ್ಸಿನ ಒತ್ತಡ ಕಡಿಮೆಯಾಗುತ್ತದೆ ಎಂಬುದು ತಪ್ಪು ಕಲ್ಪನೆ. ಮಾದಕಗಳು ವ್ಯಸನವಾಗಿ ಮಾರ್ಪಟ್ಟು, ಮಾನಸಿಕ ಸಮಸ್ಯೆಯನ್ನು ಇನ್ನಷ್ಟು ಹೆಚ್ಚಿಸುತ್ತವೆ. ಇದರಿಂದ ಯುವಪೀಳಿಗೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ತಿಳಿಸಿದರು.
ಉದ್ದಿಮೆಗಳ ಅಭಿವೃದ್ಧಿಗಾಗಿ ಯುವಜನಾಂಗವನ್ನೇ ಗುರಿಯಾಗಿಸಿ ಮಾದಕ ವ್ಯಸನಿಗಳನ್ನಾಗಿ ಮಾಡಲಾಗುತ್ತಿದೆ. ಸರ್ಕಾರದ ಜತೆಗೆ ಸಾರ್ವಜನಿಕರೂ ಇದರ ತಡೆಗೆ ಮುಂದಾಗಬೇಕು. ವ್ಯಸನಕ್ಕೆ ಸಿಲುಕಿದವರಿಗೆ ನೆರವಾಗಲು ಸಿ.ಜಿ. ಜಿಲ್ಲಾ ಆಸ್ಪತ್ರೆಯಲ್ಲಿ ಸೌಲಭ್ಯವಿದೆ. ಆಸಕ್ತರು ಇಲ್ಲಿ ನೆರವು ಪಡೆಯಬೇಕು ಎಂದವರು ಕಿವಿಮಾತು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ.ಕರೆಣ್ಣವರ್ ಮಾತನಾಡಿ, ಹದಿಹರೆಯದವರಲ್ಲೇ ಇತ್ತೀಚಿನ ದಿನಗಳಲ್ಲಿ ತಂಬಾಕು, ಮಾದಕ ವಸ್ತುಗಳ ಸೇವನೆ ಹೆಚ್ಚಿದೆ. ಜಾಹೀರಾತುಗಳ ವೈಭವೀಕರಣದಿಂದಾಗಿ ಯುವಜನರು ದಾರಿ ತಪ್ಪುತ್ತಿದ್ದಾರೆ ಎಂದು ತಿಳಿಸಿದರು.
ತಪ್ಪು ಮಾಡಿದವರು ಕಾನೂನಿನ ಬಂಧನದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಜನಸಂಖ್ಯೆಗೆ ತಕ್ಕಂತೆ ಅಧಿಕಾರಿಗಳು ಇಲ್ಲದ ಕಾರಣ ನಿಯಂತ್ರಣದಲ್ಲಿ ತಡವಾಗುತ್ತಿದೆ. ಹಾಗಾಗಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದು ಹೇಳಿದರು.
ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮಾಧಿಕಾರಿ ಡಾ. ಜಿ.ಡಿ. ರಾಘವನ್, ಭಾರತದ ಶೇ.22ರಷ್ಟು ಮಕ್ಕಳು ಒಂದಲ್ಲಾ ಒಂದು ರೀತಿ ತಂಬಾಕಿನ ರುಚಿ ನೋಡಿರುತ್ತಾರೆ ಎಂಬುದು ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ಹೀಗಾಗಿ ಮಕ್ಕಳಲ್ಲಿ ತಂಬಾಕಿನ ಅಪಾಯದ ಹೆಚ್ಚಿನ ಅರಿವು ಮೂಡಿಸುವುದು ಮುಖ್ಯ ಎಂದು ತಿಳಿಸಿದರು.
ಶಾಲೆಯಿಂದ ಹೊರಬಿದ್ದ ಮಕ್ಕಳು ಹಾಗೂ ಕೊಳೆಗೇರಿ ಮಕ್ಕಳು ತಂಬಾಕು ವ್ಯಸನಕ್ಕೆ ಸಿಲುಕುವುದು ಹೆಚ್ಚಾಗುತ್ತಿದೆ. ಹೀಗಾಗಿ ಪ್ರತಿ ವರ್ಷ 100 ಶಾಲೆಗಳನ್ನು ದತ್ತು ತೆಗೆದುಕೊಂಡು, ಅಲ್ಲಿನ ಮಕ್ಕಳಲ್ಲಿ ತಂಬಾಕು ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ತಂಬಾಕು ಸೇವನೆಯ ಪ್ರಚೋದನೆ ಹೆಚ್ಚಿದೆ ಎಂದೂ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‌ಕುಮಾರ್ ಮಾತನಾಡಿ, ತಂಪುಪಾನೀಯ ಇನ್ನಿತರೆ ಜಾಹೀರಾತುಗಳ ಮೋಡಿಗೆ ಸಿಲುಕುವ ಯುವಪೀಳಿಗೆ, ಮಕ್ಕಳು ದುಶ್ಚಟಗಳಿಗೆ ದಾಸರಾಗಿ ತಮ್ಮ ಜೀವ ಕಳೆದುಕೊಳ್ಳುತ್ತಿದ್ದಾರೆ. ಯುವಕರು ದಾರಿ ತಪ್ಪದಂತೆ ನಾವು ಜಾಗರೂಕತೆ ವಹಿಸಬೇಕು ಎಂದು ಹೇಳಿದರು.
ಪಾಲಿಕೆ ಆಯುಕ್ತೆ ರೇಣುಕಾ, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಡಿಎಚ್‌ಒ ಡಾ.ಎಸ್. ಷಣ್ಮುಖಪ್ಪ, ಚಿಗಟೇರಿ ಆಸ್ಪತ್ರೆ ಅಧೀಕ್ಷಕ ಡಾ.ಎಂ.ಬಿ.ನಾಗೇಂದ್ರಪ್ಪ, ಡಾ.ಎಲ್.ಎಂ.ಜ್ಞಾನೇಶ್ವರ ಇತರರಿದ್ದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಕೀಲರ ಸಂಘ, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಪಿ.ಜಿ ಸೆಂಟರ್ ಹಾಗೂ ವಿ.ಎಸ್. ಪ್ಯಾರಾಮೆಡಿಕಲ್ ಕಾಲೇಜು ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.