

ಹನೂರು: ನ್ಯಾಯಾಲಯದಲ್ಲಿರುವ ಶಾಲಾ ಜಾಗದ ಸಮಸ್ಯೆಯನ್ನು ಬಗೆಹರಿಸುವುದರ ಜತೆಗೆ ಮೂಲ ಸೌಕರ್ಯ ಒದಗಿಸುವಂತೆ ತಾಲೂಕಿನ ಪೆದ್ದನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ ಬುಧವಾರ ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಿದ್ದು, ಡಿಸಿ ಭರವಸೆ ಮೇರೆಗೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಒಪ್ಪಿದ್ದಾರೆ.
ಗ್ರಾಮದಲ್ಲಿ ಶಾಲಾ ಜಾಗಕ್ಕೆ ಸಂಬಂಧಿಸಿದಂತೆ ಮಾರ್ಕಂಡ ಅವರು ದಾವೆ ಹೂಡಿದ್ದು, ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಕೊಠಡಿ ನಿರ್ಮಿಸಲು ಸಾಧ್ಯವಾಗಿಲ್ಲ. ಇತ್ತ ಕುಡಿಯುವ ನೀರು ಹಾಗೂ ಶೌಚಗೃಹವಿಲ್ಲದ ಪರಿಣಾಮ ಪಾಲಕರು ಆ.11 ರಿಂದ ಮಕ್ಕಳನ್ನು ಶಾಲೆಗೆ ಕಳಹಿಸದೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಆ.14ರಂದು ಜಿಪಂ ಸಿಇಒ ಮೋನಾರೋತ್, ಡಿಡಿಪಿಐ ರಾಮಚಂದ್ರರಾಜೇ ಅರಸ್, ತಹಸೀಲ್ದಾರ್ ಕೆ.ಎನ್ ಚೈತ್ರಾ, ಬಿಇಒ ಗುರುಲಿಂಗಯ್ಯ ಹಾಗೂ ತಾಪಂ ಇಒ ಉಮೇಶ್ ಅವರು ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೋರ್ಟ್‌ನಲ್ಲಿರುವ ಶಾಲಾ ಜಾಗದ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೆ ಯಾವುದೇ ಕ್ರಮವಾಗಿರಲಿಲ್ಲ. ಇದರಿಂದ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಿರಲಿಲ್ಲ. ಆ.18 ರಂದು ಬಿಇಒ ಗುರುಲಿಂಗಯ್ಯ ಅವರು ಗ್ರಾಮಕ್ಕೆ ಮತ್ತೇ ಭೇಟಿ ನೀಡಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದ್ದರು. ಸಮಸ್ಯೆ ಬಗೆಹರಿಯುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದರಿಂದ ಕಳೆದ ಒಂದು ವಾರದಿಂದ ಮಕ್ಕಳು ಮನೆಯಲ್ಲಿಯೇ ಉಳಿಯುವಂತಾಗಿತ್ತು.
ಇದೀಗ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ವೇಳೆ ಜಿಲ್ಲಾಧಿಕಾರಿ ಅವರು ನ್ಯಾಯಾಲಯದಲ್ಲಿರುವ ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮವಹಿಸಲಾಗುವುದು. ಜತೆಗೆ ಕೂಡಲೇ ಶಾಲಾ ಕೊಠಡಿಗಳನ್ನು ರಿಪೇರಿ ಪಡಿಸಲಾಗುವುದು. ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಸಲಹೆ ನೀಡಿದರು. ಇದಕ್ಕೆ ಪರಮೇಶ್ ಗ್ರಾಮಸ್ಥರೊಂದಿಗೆ ಚರ್ಚಿಸಿ ಗುರುವಾರದಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವುದಾಗಿ ಒಪ್ಪಿದ್ದಾರೆ.
ಜಿಪಂ ಸಿಇಒ ಮೋನಾರೋತ್, ಡಿಡಿಪಿಐ ರಾಮಚಂದ್ರರಾಜೇ ಅರಸ್, ಬಿಇಒ ಗುರುಲಿಂಗಯ್ಯ, ಬಿಆರ್‌ಸಿ ವೆಂಕಟೇಶ್, ಗ್ರಾಮಸ್ಥ ಮಾದೇಶ್ ಇದ್ದರು.