

ವಿಜಯಪುರ: ಮಳೆ ಹಿನ್ನೆಲೆ ಸೃಷ್ಠಿಯಾದ ಅವಾಂತರಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಗುರುವಾರ ನಗರ ಪ್ರದಕ್ಷಿಣೆ ನಡೆಸಿದರು.
ನಗರದ ಶಿವಾಜಿ ವೃತ್ತ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜಾಮಿಯಾ ಮಸೀದಿ, ಕಸ್ತೂರಿ ಕಾಲನಿ, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋಟೆಗೋಡೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸೌಂದರ್ಯೀಕರಣಕ್ಕೆ ಒತ್ತು ನೀಡುವಂತೆ ಸೂಚಿಸಿದ ಅವರು, ಐತಿಹಾಸಿಕ ವಿಜಯಪುರ ನಗರಕ್ಕೆ ಪ್ರವಾಸಿಗರು ಆಗಮಿಸುತ್ತಿರುವುದರಿಂದ ನಗರದಾದ್ಯಂತ ಸ್ವಚ್ಛತೆಗೆ ಆದ್ಯತೆ ನೀಡಿ, ಅವಶ್ಯಕತೆ ಇದ್ದಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಮಳೆ ನೀರು ಒಂದೆಡೆ ನಿಂತು ಪ್ರವಾಹ ಪರಿಸ್ಥಿತಿಯಾಗದಂತೆ ನೋಡಿಕೊಳ್ಳಲು ಅವಶ್ಯಕವಿದ್ದೆಡೆ ಮಳೆ ನೀರು ಚರಂಡಿ ನಿರ್ಮಿಸಲು ಯೋಜನೆ ರೂಪಿಸಿ ಶಾಶ್ವತ ಪರಿಹಾರ ಕಂಡು ಕೊಳ್ಳಲು ಸೂಕ್ತ ಕ್ರಿಯಾಯೋಜನೆ ರೂಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಗರದ ಇಂಡಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಅಧೀಕ್ಷಕ ಅಭಿಯಂತರ ತಿಮ್ಮಪ್ಪ, ಕಾರ್ಯನಿರ್ವಾಹಕ ಅಭಿಯಂತರ ವಿಠಲ ಹೊನ್ನಳ್ಳಿ, ಆರೋಗ್ಯಾಧಿಕಾರಿ ಎಸ್.ಎಲ್. ಲಕ್ಕಣ್ಣವರ ಮತ್ತಿತರರಿದ್ದರು.