ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗದಿರಲಿ: ಅಧಿಕಾರಿಗಳಿಗೆ ಡಿಸಿ ಡಾ.ಕೆ.ರಾಕೇಶ್‌ಕುಮಾರ್ ಸೂಚನೆ

03TMK_DC_Meeting
Published on

ತುಮಕೂರು: ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಸೂಚಿಸಿದರು.

ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಟ್ಯಾಂಕರ್ ಮೂಲಕ ಒದಗಿಸುವ ಹಾಗೂ ಬರ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸುವ ಸಲುವಾಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಹಳ್ಳಿಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿದ್ದು, ಜನರಿಗೆ ಕುಡಿಯವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ. ತುರ್ತಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಜಿಲ್ಲೆಯ ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುಮಕೂರು ಹಾಗೂ ತುರುವೇಕೆರೆ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು ಎಚ್ಚರಿಕೆ ವಹಿಸಬೇಕು. ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಟಾಸ್ಕ್‌ಪೋರ್ಸ್ ಸಮಿತಿ ಸಭೆ ನಡೆಸಿ ನಡಾವಳಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿ ಅನುಮೋದನೆ ಪಡೆಯಬೇಕು, ಸಿಆರ್‌ಎಫ್ ನಿಧಿಯಲ್ಲಿರುವ ಅನುದಾನವನ್ನು ಭರಿಸಿ ಕುಡಿಯುವ ನೀರು ಒದಗಿಸಬೇಕು ಎಂದು ಸೂಚಿಸಿದರು. ಶಿರಾ, ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲೂಕುಗಳಲ್ಲಿ ಗ್ರಾಪಂ 14ನೇ ಹಣಕಾಸು ಯೋಜನೆಯಡಿ ಭರಿಸಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಕ್ರಮವಹಿಸಬೇಕು ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೋಬಳಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದ್ದು, ನಿಯೋಜಿತ ಅಧಿಕಾರಿಗಳು ನಿಗದಿಪಡಿಸಿರುವ ಹೋಬಳಿಗಳಿಗೆ ಭೇಟಿ ನೀಡಿ ಟ್ಯಾಂಕರ್ ಮೂಲಕ ನೀರು ಒದಗಿಸುವುದನ್ನು ದೃಢಪಡಿಸಿಕೊಳ್ಳಬೇಕು ಎಂದರು. ವೀಡಿಯೋ ಸಂವಾದದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಎಲ್ಲ ಹೋಬಳಿಗಳ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲೂಕು ತಹಸೀಲ್ದಾರರು ಇದ್ದರು.

ವಾಟ್ಸಾಪ್ ಗ್ರೂಪ್‌ಗಳಲ್ಲಿ ಹಾಕಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಜಂಟಿಯಾಗಿ ಸಭೆಯನ್ನು ಏರ್ಪಡಿಸಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆಭಾವ ಉಂಟಾಗುವ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಬೇಕು. ಪ್ರತಿದಿನ ಟ್ಯಾಂಕರ್ ಮೂಲಕ ಕುಡಿವ ನೀರನ್ನು ಒದಗಿಸುತ್ತಿರುವ ಮಾಹಿತಿಯನ್ನು ಛಾಯಾಚಿತ್ರದೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಮತ್ತು ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳ ವಾಟ್ಸಾಆ್ಯಪ್ ಗ್ರೂಪ್‌ಗಳಲ್ಲಿ ಹಾಕಬೇಕು ಎಂದು ಜಿಪಂ ಸಿಇಒ ಶುಭಾ ಕಲ್ಯಾಣ್ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net