ಚರ್ಚೆಗೆ ಗ್ರಾಸವಾದ ಡಿಸಿ ಡಾ.ಕೆ.ವಿ.ರಾಜೇಂದ್ರ ವರ್ಗಾವಣೆ

mysore
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ನಿವೇಶನ ಹಂಚಿಕೆಯಲ್ಲಿ ಹಗರಣ ಬಹಿರಂಗವಾದ ಬೆನ್ನಲ್ಲೇ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನಿಯೋಜಿಸಿದೆ.


ಡಾ.ರಾಜೇಂದ್ರ ಅವರು 2022ರ ಅ.27ರಂದು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಎರಡು ವರ್ಷಕ್ಕೂ ಮುನ್ನವೇ ಅವರನ್ನು ಈ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.


ಮುಡಾಗೆ ಅಧ್ಯಕ್ಷರನ್ನು ನೇಮಿಸುವವರೆಗೆ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಮುಡಾದಲ್ಲಿ ಕಾನೂನುಬಾಹಿರವಾಗಿ ಆಸ್ತಿಗಳನ್ನು ಹಂಚಿಕೆ ಮಾಡುತ್ತಿರುವ ಬಗ್ಗೆ ಆಯುಕ್ತರಾಗಿದ್ದ ಜಿ.ಟಿ.ದಿನೇಶ್‌ಕುಮಾರ್ ಅವರನ್ನು ವಿಚಾರಣೆ ನಡೆಸಬೇಕು,

ಅವರ ವಿರುದ್ಧ ಕೇಳಿಬಂದಿರುವ ಪ್ರತಿ ಆರೋಪಗಳನ್ನೂ ಪರಾಮರ್ಶಿಸಲು ಮತ್ತು ಉಂಟಾಗಿರುವ ನಷ್ಟದ ಸಂಬಂಧ ಕ್ರಮ ವಹಿಸಬೇಕು, ಅದಕ್ಕಾಗಿ ಸರ್ಕಾರದ ಹಂತದಲ್ಲಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಬೇಕು, ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಡಾ.ರಾಜೇಂದ್ರ ಶಿಫಾರಸು ಮಾಡಿದ್ದರು.


ಈ ವಿಷಯವಾಗಿ ರಾಜ್ಯ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದ್ದರು. ಸರ್ಕಾರಕ್ಕೆ ಅನೇಕ ಸಲ ಪತ್ರ ಬರೆದು ಕ್ರಮಕ್ಕೆ ಶಿಫಾರಸು ಮಾಡಿದ್ದರು. ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಇದೀಗ ಹಗರಣ ಬಹಿರಂಗವಾಗಿದೆ. ಇಂತಹ ಸಂದರ್ಭದಲ್ಲಿ ಡಾ.ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net