ನೀರು ಸರಬರಾಜಿಗೆ ತುರ್ತು ಕ್ರಮ ಕೈಗೊಳ್ಳಲು ಡಿಸಿ ಸೂಚನೆ

Screenshot_2023-06-19-17-32-27-53.jpg
Published on

ಬೆಳಗಾವಿ:ಮಳೆಗಾಲವಿಳಂಬವಾಗುತ್ತಿರುವುದರಿಂದ ಜಿಲ್ಲೆಯ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿರುತ್ತದೆ. ಆದ್ದರಿಂದ ಎಲ್ಲ ತಹಸೀಲ್ದಾರರು ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ಸಭೆಯನ್ನು ನಡೆಸಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಅಗತ್ಯವಿರುವ ಅನುದಾನದ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಲ್ಲ ತಹಸೀಲ್ದಾರ್‌ರಿಗೆ ನಿರ್ದೇಶನ ನೀಡಿದರು.
ಸೋಮವಾರ ಆಯೋಜಿಸಿದ್ದ ಅಧಿಕಾರಿಗಳ ವಿಡಿಯೋ ಸಂವಾದದಲ್ಲಿ ಅವರು ಸೂಚಿಸಿದರು. ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಆಯಾ ತಾಲೂಕು ಅಥವಾ ಮತಕ್ಷೇತ್ರದಲ್ಲಿ ಇರುವ ಸಮಸ್ಯೆಯನ್ನು ಕೂಲಂಕಷವಾಗಿ ಪರಿಶೀಲಿಸಿ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಅನುದಾನದ ಪ್ರಸ್ತಾವನೆ ಸಿದ್ಧಪಡಿಸಬೇಕು. ಇದರ ಆಧಾರದ ಮೇಲೆ ಹೆಚ್ಚುವರಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗುವುದು ಎಂದರು.
 ಲಭ್ಯವಿರುವ ಅನುದಾನದಲ್ಲಿ ಶಾಸಕರ ಸಲಹೆಯ ಪ್ರಕಾರ ಕಾಮಗಾರಿಗಳನ್ನು ಆರಂಭಿಸಬೇಕು. ಜನರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುರ್ತು ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಲ್ಲಿ ಬಹಳಷ್ಟು ಅನುದಾನ ಲಭ್ಯವಿದೆ. ಪ್ರತಿ ತಾಲೂಕಿಗೆ ಇನ್ನೂ ಹೆಚ್ಚಿನ ಅನುದಾನ ಹೊಂದಾಣಿಕೆ ಮೂಲಕ ಕೂಡ ಲಭಿಸಲಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಬಹುದು ಎಂದರು.
 ಟ್ಯಾಂಕರ್‌ನಿಂದ ನೀರು ಪೂರೈಕೆಗೆ ಸೂಚನೆ:
 ಜಿಲ್ಲೆಯಲ್ಲಿ ಎಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಹಾಗೂ ತುರ್ತು ಕಾಮಗಾರಿ ಆರಂಭಿಸಲು ಅನುದಾನ ಲಭ್ಯವಿದ್ದು, ಈ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಬೇಕು ಎಂದರು.
ತಹಸೀಲ್ದಾರರು ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಅರಿತು ಕೂಡಲೇ ಸ್ಪಂದಿಸಬೇಕು ಎಂದು ಸೂಚಿಸಿದರು.
 ಜಿಪಂ ಸಿಇಒ ಹರ್ಷಲ್ ಭೋಯರ್ ಮಾತನಾಡಿ, ಅಥಣಿ ತಾಲೂಕಿನ 7 ಗ್ರಾಪಂಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 40 ಕಡೆ ಕೊಳವೆಬಾವಿಗಳ ಮೂಲಕ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 4-5 ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಎಲ್ಲಿ ಸಾಧ್ಯವೋ ಅಲ್ಲಿ ತೆರೆದ ಬಾವಿ ಹಾಗೂ ಕೊಳವೆ ಬಾವಿ ನಿರ್ಮಿಸಲು ಪ್ರಸ್ತಾವನೆಗಳನ್ನು ಕೂಡ ಪಡೆಯಲಾಗುತ್ತಿದೆ ಎಂದು ತಿಳಿಸಿದರು.
 ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ ಇತರರಿದ್ದರು.
 ಜಿಲ್ಲೆಯ ಎಲ್ಲ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net