

ಬೆಂಗಳೂರು ಗ್ರಾಮಾಂತರ: ಕರೊನಾ ನಿಯಂತ್ರಣಕ್ಕಾಗಿ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಯುವ ದಿನಾಚರಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ದೇವನಹಳ್ಳಿಯಲ್ಲಿರುವ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಬುಧವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಜ.12ರಂದು ವಿವೇಕಾನಂದರ ಜನ್ಮ ದಿನಾಚರಣೆ ಆಯೋಜಿಸಲು ತೀರ್ಮಾನಿಸಲಾಯಿತು. ತಾಲೂಕು ಮಟ್ಟದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ಚರ್ಚಾ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಬೇಕು ಹಾಗೂ ಜಿಲ್ಲಾಮಟ್ಟಕ್ಕೆ ಆಯ್ಕೆ ಮಾಡಬೇಕು ಎಂದು ಡಿಸಿ ಸೂಚಿಸಿದರು.
ತಾಲೂಕುವಾರು ಒಬ್ಬ ಶಿಕ್ಷಕರನ್ನು ನೇಮಿಸಿ, ಆ ಶಿಕ್ಷಕರು ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮೊದಲೇ ಕೋವಿಡ್ ಪರೀಕ್ಷೆ ಮಾಡಿಸಿರಬೇಕು. ಶಿಕ್ಷಕರೂ ಕಾಳಜಿವಹಿಸುವ ನಿಟ್ಟಿನಲ್ಲಿ ನಿಮಯಗಳನ್ನು ಪಾಲಿಸಬೇಕು ಎಂದರು.
10 ಮಂದಿಗೆ ಸಾಂಕೇತಿಕ ಕಿಟ್: ಕರೊನಾ ನಿಯಮ ಪಾಲಿಸಬೇಕಾದ್ದರಿಂದ ಕ್ರೀಡಾ ಕಿಟ್‌ಗಳನ್ನು ವಿತರಿಸುವಾಗ ಸಾಂಕೇತಿಕವಾಗಿ ವೇದಿಕೆ ಮೇಲೆ ಐದರಿಂದ ಹತ್ತು ಜನರಿಗೆ ಮಾತ್ರ ನೀಡಿ, ಕಾರ್ಯಕ್ರಮದ ನಂತರ ಉಳಿದವರಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಉಷ್ಣಾಂಶ ತಪಾಸಣೆ ನಡೆಸಲು ಸಿಬ್ಬಂದಿ ನಿಯೋಜಿಸಬೇಕು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿ ಡಾ.ಮಂಜುಳಾದೇವಿಗೆ ತಿಳಿಸಿದರು.
ಕರೊನಾ ಸೇನಾನಿಗಳಿಗೆ ಸನ್ಮಾನ: ಶಾಲಾ-ಕಾಲೇಜುಗಳು, ಪದವಿ ಹಂತದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟಕೊಂಡು ಕರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಸೇವೆ ಸಲ್ಲಿಸಿರುವ ಎನ್ನೆಸ್ಸೆಸ್ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ ನಾಯಕ್ ಸಲಹೆ ನೀಡಿದರು.