ಬಾಲ ಕಾರ್ಮಿಕರ ಪತ್ತೆಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

11_HSN_01
Published on

ಹಾಸನ: ಜಿಲ್ಲೆಯಲ್ಲಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಒಂದು ತಂಡವಾಗಿ ಸಮನ್ವಯತೆಯಿಂದ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚಿ ಅಗತ್ಯ ಕ್ರಮ ವಹಿಸಬೇಕು. ಬಾಲಕಾರ್ಮಿಕರಾಗಿ ಪತ್ತೆಯಾದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದಾಗ ಮಗುವನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಗಮನಕ್ಕೆ ತಂದು ಬಿಡುಗಡೆಗೊಳಿಸಬೇಕು ಹಾಗೂ ಮಗುವಿನ ಮುಂದಿನ ವಿದ್ಯಾಭ್ಯಾಸದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸೋಶಿಯಲ್ ಇನ್ವೆಸ್ಟಿಗೇಷನ್ ವರದಿಯನ್ನು ಆಧರಿಸಿ ಮಗುವನ್ನು ಬಿಡುಗಡೆಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕಾರ್ಮಿಕ ಇಲಾಖೆಯು ಬಿಡುಗಡೆಯಾದ ಮಗುವಿನ ಅನುಪಾಲನೆ ಮಾಡಬೇಕೆಂದು ಸೂಚಿಸಿದರು.

ಎಲ್ಲ ಇಲಾಖೆಗಳ ಸಹಭಾಗಿತ್ವದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಕೆಲಸ ಮಾಡಬೇಕು. ಬಾಲ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಾಗ ಪೊಲೀಸ್ ಇಲಾಖೆ ನಿರ್ಲಕ್ಷೃ ವಹಿಸದೆ ಸಂಬಂಧಪಟ್ಟ ಇಲಾಖೆಯು ಕ್ರಮಕೈಗೊಳ್ಳಲು ಸಹಕರಿಸಬೇಕು. ಬಾಲಕಾರ್ಮಿಕ ಹಾಗೂ ಕಿಶೋರಾವಸ್ತೆ ಕಾರ್ಮಿಕರು ಪತ್ತೆಯಾದಾಗ ಮಕ್ಕಳ ವಯಸ್ಸಿನ ದೃಢೀಕರಣ ಪತ್ರ ಮಾಡಿಕೊಡಲು ಜಿಲ್ಲಾ ವೈದ್ಯಾಧಿಕಾರಿ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಾಕ್ಷಾಯಿಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net