

ಮಡಿಕೇರಿ:
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧ ಮಾಹಿತಿ ಪಡೆದು ಸೋಮವಾರ ಮಾತನಾಡಿದರು.
ಡೆಂಗಿ, ಚಿಕನ್ ಗುನ್ಯ, ಮಲೇರಿಯ ಮತ್ತಿತರ ಸಾಂಕ್ರಾಮಿಕ ರೋಗ ತಡೆಯುವಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಶಾಲೆಗಳು, ಕಚೇರಿಗಳು, ಇತರೆ ಎಲ್ಲೆಡೆ ನೀರಿನ ಟ್ಯಾಂ???ನ್ನು ಆರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಕಳೆದ ಮೂರು ತಿಂಗಳಲ್ಲಿ ೨೫ ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ. ಮನೆಯ ಸುತ್ತಮುತ್ತ ಪರಿಸರ ಶುಚಿತ್ವ ಕಾಪಾಡಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ನೀಡಿದ ಆ???ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಚಿಕ್ಕಮಕ್ಕಳಲ್ಲಿ ಅತಿಸಾರ ಭೇದಿ ನಿಯಂತ್ರಿಸುವುದು ಮತ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕಿದೆ ಎಂದರು.
ಶಿಶುಗಳಿಗೆ ೬ ತಿಂಗಳವರೆಗೆ ಎದೆಹಾಲು ಕೊಡುವುದು ಕಡ್ಡಾಯ. ೬ ತಿಂಗಳಿಂದ ೨ ವರ್ಷದವರೆಗೆ ಎದೆ ಹಾಲಿನ ಜೊತೆಗೆ ಪೂರಕ ಆಹಾರ ಕೊಡುವುದು, ಅತಿಸಾರ ಭೇದಿ ತಡೆಗಟ್ಟುವಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವುದು, ಸಾಬೂನಿನಿಂದ ಕೈತೊಳೆಯುವುದು, ಅತಿಸಾರ ಭೇದಿಯಿಂದ ದೇಹದಲ್ಲಿ ಪೋಷಕಾಂಶದ ಕೊರತೆ, ಆರೋಗ್ಯದಲ್ಲಿ ಕ್ಷೀಣತೆ, ಅಪೌಷ್ಠಿಕತೆ, ರೋಗ ನಿರೋಧಕ ಶಕ್ತಿ ಕುಂದುವಿಕೆ ಹೆಚ್ಚಾಗುತ್ತದೆ ಎಂದು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಶಿಶು ಮರಣ ತಡೆಯುವಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆರೋಗ್ಯದ ಕಡೆ ಹೆಚ್ಚಿನ ಮಹತ್ವ ನೀಡುವಲ್ಲಿ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು. ಇದೇ ವೇಳೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಎಲ್ಲಾ ಕಚೇರಿಗಳಲ್ಲಿ ತಂಬಾಕು ಮುಕ್ತ ವಲಯ ಎಂದು ನಾಮಫಲಕ ಅಳವಡಿಸಲಾಗಿದೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳುವಂತೆ ಸೂಚಿಸಿದರು.
ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಕೋಪ್ಟಾ ಕಾಯ್ದೆ ನಿಯಂತ್ರಣ ಸೇರಿದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸೇರಿಸಿಕೊಂಡು ಕಾರ್ಯಕ್ರಮ ಆಯೋಜಿಸುವಂತೆ ಸಲಹೆ ಮಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಯತಿರಾಜ್, ಡಾ.ಚೇತನ್, ಡಾ.ಅನಿಲ್ ಧವನ್, ಡಾ.ಸೋಮಶೇಖರ್ ಮತ್ತು ಡಾ.ಕುಸ್ವಂತ್ ಕೋಳಿಬೈಲು ಇತರರು ಹಲವು ಮಾಹಿತಿ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್ ಇತರರು ಇದ್ದರು.