ಶಿಕ್ಷಕರ ಅರ್ಹತಾ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

dc shivashankar
DC shivashankar
Published on

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮಾಹಿತಿ

1200 ಅಭ್ಯರ್ಥಿಗಳು ನೋಂದಣಿ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜೂ.30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯ ದೊಡ್ಡಬಳ್ಳಾಪುರದಲ್ಲಿ 5 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆ 2 ಅವಧಿಗಳಲ್ಲಿ ನಡೆಯಲಿದ್ದು, ಮೊದಲ ಅವಧಿಯಲ್ಲಿ 713 ಅಭ್ಯರ್ಥಿಗಳು ಹಾಗೂ 2ನೇ ಅವಧಿಯಲ್ಲಿ 1052 ಅಭ್ಯರ್ಥಿಗಳು ಸೇರಿ1200 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಸಲುವಾಗಿ ಒಬ್ಬರು ನೋಡಲ್ ಅಧಿಕಾರಿ, 4 ಮಾರ್ಗಾಧಿಕಾರಿಗಳು, ಐವರು ಮುಖ್ಯ ಅಧಿಕ್ಷಕರು, ಐವರು ಸ್ಥಾನಿಕ ಜಾಗೃತದಳದ ಅಧಿಕಾರಿಗಳು 5 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು ಹಾಗೂ ಪ್ರತಿ ಕೊಠಡಿಗೆ ಒಬ್ಬರಂತೆ ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಪರೀಕ್ಷೆಯನ್ನು ನಡೆಸುವ ಸಲುವಾಗಿ ಡಯಟ್ ಪ್ರಾಂಶುಪಾಲರನ್ನು ಪರೀಕ್ಷಾ ಕೇಂದ್ರದ ವೀಕ್ಷಕರಾಗಿ ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಭದ್ರತೆ ವ್ಯವಸ್ಥೆಗಾಗಿ ಇಬ್ಬರು ಪೊಲೀಸ್ ಸಿಬ್ಬಂದಿ ನಿಯೋಜಿಸಲು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮಾರ್ಗಾಧಿಕಾರಿಗಳು ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಬೇಕು ಹಾಗಯೇ ಪ್ರತಿ ಅಧಿವೇಶನಕ್ಕಾಗಿ ಪ್ರತ್ಯೇಕ ವೀಡಿಯೊ ಚಿತ್ರಿಕರಣ ಮಾಡಿಸಬೇಕು. ಪರೀಕ್ಷಾ ಕಾರ್ಯದಲ್ಲಿ ಎಲ್ಲರೂ ಜವಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.
ಪರೀಕ್ಷಾ ಕೊಠಡಿಯಲ್ಲಿ ನಿಷೇಧ: ಮೊದಲನೇ ಅವಧಿಯ ಪರೀಕ್ಷೆ ಬೆಳಗ್ಗೆ 9.30 ಕ್ಕೆ ಹಾಗೂ 2ನೇ ಅವಧಿಯ ಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ಪರೀಕ್ಷೆ ನಡೆಯುವ 1 ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಾಗಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್, ಕೈಗಡಿಯಾರ, ಕ್ಯಾಲ್ಕುಲೇಟರ್ ಸೇರಿದಂತೆ ಇತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವಿಕಲಚೇತನ ಅಭ್ಯರ್ಥಿಗಳಿಗೆ ಅಂಗವಿಕಲತೆಯ ಪ್ರಮಾಣಪತ್ರ ಆಧರಿಸಿ ಪರೀಕ್ಷೆ ಬರೆಯಲು ಪ್ರತಿ ಗಂಟೆಗೆ 20 ನಿಮಿಷ ಹೆಚ್ಚುವರಿ ಕಾಲಾವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಪಡೆಯುವುದು ಮುಖ್ಯ ಅಧೀಕ್ಷಕರ ಜವಾಬ್ದಾರಿಯಾಗಿದೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net