ದೂರು ಬಂದರೆ ತಕ್ಷಣ ಸ್ಪಂದಿಸಬೇಕು

DC meeting
ದೇವನಹಳ್ಳಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮಾತನಾಡಿದರು. ಜಿಲ್ಲಾ ಕಾನೂನು ಪ್ರಾಧಿಕಾರ ಸದಸ್ಯ ನ್ಯಾಯಮೂರ್ತಿ ಬೋಲಾ ಪಂಡಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅನೀತಾಲಕ್ಷ್ಮೀ, ಹೊಸಕೋಟೆ ವಿಭಾಗದ ಡಿವೈಎಸ್ಪಿ ಶಂಕಗೌಡ ಅಣ್ಣಾ ಸಾಹೇಬ್ ಪಾಟೀಲ್ ಇದ್ದರು.
Published on

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚನೆ

ಡಿಸಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಸಭೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಮೇಲ್ವಿಚಾರಣೆ ಸಮಿತಿ, ಪೋಷಣ್ ಅಭಿಯಾನ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ, ಬಾಲ್ಯ ವಿವಾಹ ನಿಷೇಧ ಸಮಿತಿ ಸಭೆಯಲ್ಲಿ ಮಾತನಾಡಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಜಿಲ್ಲೆಯಲ್ಲಿ 2024ರ ಏಪ್ರಿಲ್ನಿಂದ ಆಗಸ್ಟ್‌ವರೆಗೆ 16 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ದೇವನಹಳ್ಳಿಯಲ್ಲಿ 6, ದೊಡ್ಡಬಳ್ಳಾಪುರ 9, ಹೊಸಕೋಟೆಯಲ್ಲಿ 1 ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಪ್ರತಿ ಮನೆಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕಾನೂನುಗಳ ಕರಪತ್ರ ಹಂಚುವ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತಂತೆ ಪಾಲಕರಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನದ ಭಾಗವಾಗಿರುವ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಸಹಾಯವಾಣಿಗೆ ಕರೆ ಮಾಡಿ: ಸಾರ್ವಜನಿಕರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆ ಗಮನಕ್ಕೆ ತುರ್ತಾಗಿ ತರಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ಅಂಗನವಾಡಿಗಳಿಗೆ ಕಾಯಕಲ್ಪ: ಜಿಲ್ಲೆಯಲ್ಲಿ ಒಟ್ಟು 1277 ಅಂಗನವಾಡಿ ಕೇಂದ್ರಗಳಿದ್ದು, 999 ಸ್ವಂತ ಅಂಗನವಾಡಿ ಕಟ್ಟಡಗಳು, 4 ಪಂಚಾಯಿತಿ ಕಟ್ಟಡಗಳಲ್ಲಿ, 50 ಅಂಗನವಾಡಿಗಳು ಸಮುದಾಯ ಭವನದಲ್ಲಿ, 88 ಅಂಗನವಾಡಿಗಳು ಶಾಲೆಗಳಲ್ಲಿ ಹಾಗೂ 132 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಿ ಸಿಎಸ್‌ಆರ್ ಅನುದಾನದಡಿ ಅಂಗನವಾಡಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶೌಚಗೃಹ, ವಿದ್ಯುತ್, ನೀರು ಸೇರಿ ಮೂಲ ಸೌಕರ್ಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಡಿಸಿ ಸೂಚಿಸಿದರು.ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಠಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು ಎಂದರಲ್ಲದೆ ಐಸಿಡಿಎಸ್ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net