

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ, ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಿ ನೊಂದವರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎರಡನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಲ್ಲಿ ಮಾತನಾಡಿದರು.
ತಾಲೂಕುಮಟ್ಟದಲ್ಲಿ ಆಯಾ ತಾಲೂಕು ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ ನಾಲ್ಕು ಸಭೆಗಳನ್ನು ನಡೆಸಬೇಕು. ಉಪವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ನಿಗದಿತ ಸಮಯಕ್ಕೆ ಸಭೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವ ವೇಳೆ ಸಂಬಂಧಿಸಿದ ಠಾಣಾ ಪೊಲೀಸರು ವಿಳಂಬ ನೀತಿ ಅನುಸರಿಸಬಾರದು. ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ಶೀಘ್ರ ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದರು.
25 ಪ್ರಕರಣಗಳಿಗೆ ಚಾರ್ಜ್‌ಶೀಟ್ ಬಾಕಿ 2023ರ ಮಾರ್ಚ್‌ನಿಂದ ಜೂನ್ ಅಂತ್ಯದವರೆಗೆ ದೌರ್ಜನ್ಯ ಪ್ರಕರಣದ ಕಾಯ್ದೆಯಡಿ ಜಿಲ್ಲೆಯ ನಾಲ್ಕೂ ತಾಲೂಕುಗಳ ಪೈಕಿ 32 ಸಂತ್ರಸ್ತರಿಗೆ 10 ಲಕ್ಷ ರೂಪಾಯಿಗಿಂತ ಹೆಚ್ಚು ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ದಾಖಲಾದ 28 ಪ್ರಕರಣಗಳ ಪೈಕಿ 4 ಪ್ರಕರಣಗಳಿಗೆ ಪರಿಹಾರ ಧನ ಮಂಜೂರು ಮಾಡಲು ಬಾಕಿ ಇದೆ. 25 ಪ್ರಕರಣಗಳಿಗೆ ಚಾರ್ಜ್‌ಶೀಟ್ ಸಲ್ಲಿಕೆ ಪ್ರಕ್ರಿಯೆ ಬಾಕಿ ಇದೆ ಎಂದು ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪ್ರೇಮಾ ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ದಾಖಲಾಗುವ ಪ್ರಕರಣಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ನೀಡಬೇಕು ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.