ರೈತರಿಗೆ ಬಿತ್ತನೆ ಬೀಜ, ಗೊಬ್ಬರ ವಿತರಿಸಿ- ಡಿಸಿ ನಿತೇಶ ಪಾಟೀಲ ಸೂಚನೆ

IMG-20230523-WA0018.jpg
Published on

ಬೆಳಗಾವಿ, ಮೇ 23(ಕರ್ನಾಟಕ ವಾರ್ತೆ): ಮುಂಗಾರು ಹಂಗಾಮಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಮೇ 25 ರಿಂದ ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಒಟ್ಟು 170 ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆಯನ್ನು ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳ ವಿಡಿಯೋ ಸಂವಾದದ ಬಳಿಕ ಅಧಿಕಾರಿಗಳ ಸಭೆಯನ್ನು ನಡೆಸಿದ ಅವರು, ಯಾವುದೇ ಕಾರಣಕ್ಕೂ ರೈತರಿಗೆ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮೇ 25 ರಿಂದ ಬಿತ್ತನೆ ಬೀಜ ವಿತರಣೆ ಆರಂಭಗೊಳ್ಳಲಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳ ಸಮರ್ಪಕವಾಗಿ ವಿತರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದಲ್ಲದೇ ಗೊಬ್ಬರ ಹಾಗೂ ಕೀಟನಾಶಕಗಳ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಬೆಳೆ ಪರಿಹಾರ ವಿತರಣೆಗೆ ಕ್ರಮ:

ರಾಜ್ಯ ಸರಕಾರವು ಶೀಘ್ರದಲ್ಲೇ "ಪರಿಹಾರ ಪೋರ್ಟಲ್" ತೆರೆದು ಬೆಳೆಹಾನಿ ವಿವರ ಭರ್ತಿಗೆ ಅವಕಾಶ ಕಲ್ಪಿಸಲಿದೆ. ಆದ್ದರಿಂದ ಜಿಲ್ಲೆಯಲ್ಲಿ ಇತ್ತೀಚಿನ ಮಳೆಯಿಂದ ಉಂಟಾಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.

ಯಾವುದೇ ಜನ-ಜಾನುವಾರುಗಳ ಪ್ರಾಣಹಾನಿ ಸಂಭವಿಸಿದಲ್ಲಿ 24 ಗಂಟೆಗಳಲ್ಲಿ ನಿಯಮಾವಳಿ ಪ್ರಕಾರ ಪರಿಹಾರವನ್ನು ಒದಗಿಸಬೇಕು ಎಂದು ಉಪ ವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಶಿಥಿಲ ಶಾಲಾ ಕೊಠಡಿಗಳ ಪರಿಶೀಲನೆಗೆ ಸೂಚನೆ:

ಮಳೆಗಾಲ ಆರಂಭಗೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ಶಿಥಿಲ ಗೊಂಡಿರುವ ಶಾಲಾ ಕೊಠಡಿಗಳನ್ನು ಪರಿಶೀಲಿಸಬೇಕು. ಒಂದು ವೇಳೆ ಶಿಥಿಲಗೊಂಡಿರುವ ಕಟ್ಟಡಗಳಿದ್ದರೆ ಅವುಗಳ ದುರಸ್ತಿ ಮಾಡಬೇಕು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಳಗಾವಿ ನಗರದಲ್ಲಿ ಮಳೆಗಾಲದಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಕಸ ತೆಗೆದು ಸ್ವಚ್ಛತೆ ಮಾಡಬೇಕು.
ಶಿಥಿಲಗೊಂಡಿರುವ ಸೇತುವೆ, ರಸ್ತೆಗಳ ದುರಸ್ತಿ ಮಾಡಬೇಕು. ಯಾವುದೇ ರೀತಿಯ ಅನಾಹುತ ಆಗದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಅಪಾಯದ ಮಟ್ಟ ತಲುಪುವ ಕೆರೆಕಟ್ಟೆಗಳ ಮೇಲೆ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ಉಪಸ್ಥಿತರಿದ್ದರು.
ಉಪ ವಿಭಾಗಾಧಿಕಾರಿ ಬಲರಾಮ್ ಚವಾಣ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ ಸೇರಿದಂತೆ ಕೃಷಿ, ತೋಟಗಾರಿಕೆ, ನೀರಾವರಿ, ಆಹಾರ, ಆರೋಗ್ಯ, ಪಶುಪಾಲನೆ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net