

ಮಂಡ್ಯ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಅಂತೆಯೇ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೌರ್ಜನ್ಯ ಪ್ರಕರಣಗಳ ವಿಲೇವಾರಿ ವಿಳಂಬವಾಗುತ್ತಿದೆ. ಸಾಕ್ಷ್ಯ ಸಹಿತ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸರಿಯಾದ ಸಮಯಕ್ಕೆ ಸಲ್ಲಿಕೆ ಮಾಡಬೇಕು. ಆರೋಪಿ ಖುಲಾಸೆ ಆಗದಂತೆ ಎಚ್ಚರವಹಿಸಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಎಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ 2021ರಲ್ಲಿ 58, 2022ರಲ್ಲಿ 65 ಹಾಗೂ 2023ರಲ್ಲಿ 53 ದೌರ್ಜನ್ಯ ಪ್ರಕರಣ ದಾಖಲಾಗಿವೆ. ಇವುಗಳನ್ನು ಶೀಘ್ರ ಇತ್ಯರ್ಥಗೊಳಿಸಿ. ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪ್ರತಿ ಮಾಹೆ ಎಸ್ಸಿ, ಎಸ್ಟಿ ಸಮುದಾಯದವರ ಕುಂದು ಕೊರತೆ ಸಭೆ ಹಾಗೂ ದೌರ್ಜನ್ಯಕ್ಕೊಳಗಾದ ಸಂತ್ರಸ್ಥರ ಸಭೆ ಮಾಡಬೇಕು. ಜತೆಗೆ ದೌರ್ಜನ್ಯ ಪ್ರಕರಣ ದಾಖಲಿಸಿ ನಿಗದಿತ ಸಮಯದೊಳಗೆ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಬಗ್ಗೆ ಪರಿಶೀಲನೆ ಮಾಡಬೇಕು. ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ಮಂಜೂರು ಮಾಡುವ ಬಗ್ಗೆ ಕ್ರಮ ವಹಿಸಬೇಕು ಎಂದರು.
ಪ್ರಮುಖವಾಗಿ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯದಾರರಿಗೆ ಸೂಕ್ತ ರಕ್ಷಣೆ ನೀಡುವುದರ ಜತೆಗೆ ಅವಶ್ಯಕ ಸಾಕ್ಷ್ಯಾಧಾರಗಳನ್ನು ಒದಗಿಸಿ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಕ್ರಮವಹಿಸಬೇಕು. ಈ ಬಗ್ಗೆ ವಕೀಲರ ನೇತೃತ್ವದಲ್ಲಿ ಸಮಿತಿ ರಚಿಸಿ ವಿಶೇಷ ಮಾಹಿತಿ ಪಡೆಯಬೇಕು. ಉಪ ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ದೌರ್ಜನ್ಯ ಪ್ರಕರಣವನ್ನು ಸಾಧ್ಯವಾದಷ್ಟು ತಹಸೀಲ್ದಾರ್ ಹಾಗೂ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಜಂಟಿಯಾಗಿ ತನಿಖೆ ಮಾಡಿ ಪ್ರಕರಣ ಇತ್ಯರ್ಥಗೊಳಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, 2023ರಲ್ಲಿ 53 ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಅದರಲ್ಲಿ 47 ಪ್ರಕರಣ ಇತ್ಯರ್ಥವಾಗಿದೆ. ಪ್ರಕರಣ ದಾಖಲಾದ ಕೂಡಲೇ ನೊಂದ ಸಂತ್ರಸ್ಥರಿಗೆ ಸರ್ಕಾರದಿಂದ ಕಾಲಮಿತಿಯೊಳಗೆ ಪರಿಹಾರ ಮಂಜೂರು ಮಾಡುವ ಸಂಬಂಧ ಪ್ರಥಮ ವರ್ತಮಾನ ವರದಿಯ ಪ್ರತಿಯನ್ನು ಪ್ರಕರಣ ದಾಖಲಾದ ದಿನದಂದೆ ಆಯಾಯ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ್ ಮಾತನಾಡಿ, ದೌಜನ್ಯ ಪ್ರಕರಣದಲ್ಲಿ ಎ್ಐಆರ್ ಹಾಗೂ ಚಾರ್ಚ್‌ಶೀಟ್ ಸ್ವೀಕೃತವಾದ ಕೂಡಲೇ ನಿಯಮಾನುಸಾರ ಸಂತ್ರಸ್ತರಿಗೆ ಪರಿಹಾರವನ್ನು ಮಂಜೂರು ಮಾಡಲು ಕ್ರಮ ವಹಿಸಲಾಗಿದೆ. ಅದರಂತೆ ಈ ವರ್ಷ ಏಪ್ರಿಲ್ನಿಂದ ಆಗಸ್ಟ್‌ವರೆಗೆ 36 ಪ್ರಕರಣದಲ್ಲಿ 73 ಸಂತ್ರಸ್ತರಿಗೆ 61.59 ಲಕ್ಷ ರೂ ಪರಿಹಾರವನ್ನು ಪಾವತಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸ್ೀ, ಸಮಿತಿ ಸದಸ್ಯರಾದ ವೆಂಕಟಗಿರಿ, ಗುರುಪ್ರಸಾದ್, ಚಂದ್ರಶೇಖರ್ ಇತರರಿದ್ದರು.