

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜನರ ಸಹಕಾರ ಮುಖ್ಯ. ಆದ್ದರಿಂದ ಪ್ರತಿಯೊಬ್ಬರು ಸಹ ಸಕ್ರಿಯವಾಗಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮ್ಮೇಳನ ಯಶಸ್ವಿಯಾಗಿ ನಡೆಸಲು ಜಿಲ್ಲೆಯ ಹಿರಿಯ ಸಾಹಿತಿಗಳು, ಕನ್ನಡ ಅಭಿಮಾನಿಗಳು, ಸಾಹಿತ್ಯ ಪ್ರೇಮಿಗಳು, ಜನಪ್ರತಿನಿಧಿಗಳು, ಸಾಹಿತ್ಯಾಸಕ್ತರ ಪಾಲ್ಗೊಳ್ಳುವಿಕೆ ಅಮೂಲ್ಯವಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಸಲಹೆಗಳೊಂದಿಗೆ ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಲು ಎಲ್ಲರನ್ನೂ ಒಳಗೊಂಡಂತೆ 25 ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕೆ ಉತ್ತಮವಾದ ಸ್ಥಳವನ್ನು ಸಧ್ಯದಲ್ಲೇ ನಿಗದಿ ಮಾಡಿ ತಿಳಿಸುತ್ತೇವೆ. ಹಿರಿಯ ಸಾಹಿತ್ಯ ದಿಗ್ಗಜರಿಗೆಲ್ಲ ಆಹ್ವಾನ ನೀಡಬೇಕು. ನಗರದ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಬೇಕು. ಸಮ್ಮೇಳನಕ್ಕೆ ಬರುವ ಪ್ರತಿಯೊಬ್ಬರಿಗೂ ಸಹ ಯಾವುದೇ ಲೋಪದೋಷವಾಗದಂತೆ ನೋಡಿಕೊಳ್ಳುತ್ತೇವೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಪ್ರತಿಯೊಬ್ಬರಿಗೂ ಸಮನಾಂತರ ವೇದಿಕೆ ಕಲ್ಪಿಸಿ ಕೊಡಬೇಕು. ಮಂಡ್ಯ ಜಿಲ್ಲೆ ಮಾತ್ರವಲ್ಲದೆ ಬೇರೆ ಬೇರೆ ಕಡೆಯ ಸಾಹಿತ್ಯ ದಿಗ್ಗಜರು ಭಾಗವಹಿಸುತ್ತಾರೆ. ಖಾಸಗಿ ಸಂಘಟನೆಗಳು ಮಾತ್ರವಲ್ಲದೆ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರನ್ನೆಲ್ಲ ಕರೆಯಬೇಕು. ಸಂಸ್ಕೃತಿ ಸಂಪ್ರದಾಯಕ್ಕೆ ಯಾವುದೇ ತರಹದ ಧಕ್ಕೆ ಉಂಟಾಗದಂತೆ ಹಾಗೂ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲವಾಗದಂತೆ ಸಮ್ಮೇಳನ ನಡೆಸುತ್ತೇವೆ ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಕಸಾಪ ಮಾಜಿ ಜಿಲ್ಲಾಧ್ಯಕ್ಷರಾದ ಮೀರಾ ಶಿವಲಿಂಗಯ್ಯ, ಪ್ರೊ.ಎಚ್.ಎಸ್.ಮುದ್ದೇಗೌಡ, ಕಸಾಪ ನಗರ ಘಟಕದ ಅಧ್ಯಕ್ಷೆ ಸುಜಾತಾ ಕೃಷ್ಣ ಇತರರಿದ್ದರು.