ಫೆ.18ರಂದು ಮಳವಳ್ಳಿಗೆ ಸಿಎಂ ಪ್ರವಾಸ: ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

Dc Meeting mandya
Published on

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.18ರಂದು ಮಳವಳ್ಳಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸಚಿವರು, ಶಾಸಕರು ಹಾಗೂ ಎಲ್ಲ ಜನಪ್ರತಿನಿಧಿಗಳನ್ನು ಶಿಷ್ಟಾಚಾರದ ಪ್ರಕಾರ ಆಯಾ ಇಲಾಖೆ ಅಧಿಕಾರಿಗಳಿಗೆ ನೀಡಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಘಟಿಸಲು ವೇದಿಕೆ, ಆಹಾರ, ವಸ್ತುಪ್ರದರ್ಶನ, ಫಲಾನುಭವಿಗಳ ಆಯೋಜನೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದರು.

ಅಂದು ಹೆಚ್ಚಿನ ಜನ ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮ ಅಚ್ಚುಕಟ್ಟಾಗಿರಲಿ. ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಿರಲಿ. ಆಂಬ್ಯುಲೆನ್ಸ್ ಸೇರಿದಂತೆ ನುರಿತ ವೈದ್ಯರ ತಂಡವಿರಲಿ. 40 ವಸ್ತುಪ್ರದರ್ಶನ ಮಳಿಗೆಯಲ್ಲಿ 20 ಮಳಿಗೆಗಳಲ್ಲಿ ಎನ್‌ಆರ್‌ಎಲ್‌ಎಂ ಮಹಿಳಾ ಸಂಘಗಳಿಗೆ ತಮ್ಮ ಸಂಸ್ಥೆಯ ಉತ್ಪನ್ನಗಳ ಮಾರಾಟ ಮಾಡಲು ವ್ಯವಸ್ಥೆ ಮಾಡಿ ಕೊಡಿ. ಇನ್ನುಳಿದ 20 ಮಳಿಗೆಗಳಲ್ಲಿ ವಿವಿಧ ಇಲಾಖೆಯವರು ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಆಕರ್ಷಕ ಹಾಗೂ ವಿನೂತನವಾಗಿ ಆಯೋಜಿಸಿ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ. ಸಾರ್ವಜನಿಕರಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಗೃಹ, ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಿ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಜಿಲ್ಲಾ ಪಂಚಾಯಿಸಿ ಸಿಪಿಒ ಸಂಜೀವಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಜಂಟಿ ಕೃಷಿ ನಿರ್ದೇಶಕ ಡಾ.ವಿ.ಎಸ್.ಅಶೋಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಾಜಮೂರ್ತಿ, ಮಳವಳ್ಳಿ ತಹಸೀಲ್ದಾರ್ ಲೋಕೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net