ಶಿಕ್ಷಣ ಸಂಸ್ಥೆ ಸಮೀಪವೇ ತಂಬಾಕು ಮಾರಾಟ: ಕಾನೂನು ಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಸೂಚನೆ

24_11_Mdy_01(Dc Meeting)
Published on

ಮಂಡ್ಯ: ಜಿಲ್ಲೆಯ 497 ಶಿಕ್ಷಣ ಸಂಸ್ಥೆಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವುದನ್ನು ತಂಬಾಕು ನಿಯಂತ್ರಣಾ ಕೋಶ ಗುರುತಿಸಿದ್ದು, ಪೊಲೀಸ್ ಇಲಾಖೆ ಸಹಯೋಗದಲ್ಲಿ ದಾಳಿ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ, ಕಾಲೇಜು ಶಿಕ್ಷಣ ಸಂಸ್ಥೆಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ತಂಬಾಕು ನಿಯಂತ್ರಣಾ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳು ಸಮನ್ವಯವಾಗಿ ಕಾರ್ಯನಿರ್ವಹಿಸಬೇಕು ಎಂದರು.

ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ:

ಪ್ರೌಢಶಾಲೆ ಹಾಗೂ ಕಾಲೇಜು ಹಂತದಲ್ಲಿ ತಂಬಾಕು ಸೇವನೆ ದುಶ್ಚಟಗಳಿಗೆ ಮಕ್ಕಳು ಹೆಚ್ಚಾಗಿ ಒಳಗಾಗುತ್ತಾರೆ. ಇದರ ಸೇವನೆಯಿಂದ ಉಂಟಾಗುವ ಕ್ಯಾನ್ಸರ್ ಮುಂತಾದ ಕಾಯಿಲೆಗಳ ಬಗ್ಗೆ ಮಕ್ಕಳಿಗೆ ಕಿರುಚಿತ್ರಗಳ ಮೂಲಕ ತಿಳಿಸಿ ಇದರಿಂದ ಮಕ್ಕಳ ಮನಸ್ಸಿನ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಶಿಕ್ಷಣ ಸಂಸ್ಥೆಗಳಲ್ಲಿ ಆಟದ ಮೈದಾನದಲ್ಲಿ ಶಾಲಾ ಕಾಲೇಜು ಕಾರ್ಯನಿರ್ವಹಣೆಯ ಅವಧಿಯ ನಂತರ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿ ಮದ್ಯಪಾನ, ತಂಬಾಕು ವಸ್ತು ಸೇವನೆ ಮಾಡಬಹುದು. ಈ ಬಗ್ಗೆ ಶಾಲಾ ಮುಖ್ಯಸ್ಥರು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ ಮಾತನಾಡಿ, ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಯ ಬಗ್ಗೆ 58 ದಾಳಿ ನಡೆಸಿ 1,43,480 ರೂ ದಂಡ ಸಂಗ್ರಹಿಸಲಾಗಿದೆ ಎಂದು ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ಇನ್ನೂ ಹೆಚ್ಚಿನ ದಾಳಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ.ಡಿ.ಸಂಜಯ್, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಡಿಎಲ್ಒ ಡಾ.ಅಶ್ವಥ್, ಡಿಎಂಒ ಡಾ.ಭವಾನಿ ಶಂಕರ್, ಡಾ.ಶಶಿಧರ್, ಜಿಲ್ಲಾ ಸಲಹೆಗಾರ ತಿಮ್ಮರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net